ಮಂಗಳೂರು: ಡಾ.ಪಿ.ವೆಂಕಟರಾಜ ಪುಣಿಂಚತ್ತಾಯ ಅವರ ಸಂಸ್ಮರಣೆ ಹಾಗೂ ಪುವೆಂಪು ಪ್ರಶಸ್ತಿ ಪ್ರದಾನ ಸಮಾರಂಭ ಅ. 24ರಂದು ಮಂಜೇಶ್ವರದ ಗಿಳಿವಿಂಡುವಿನಲ್ಲಿ ನಡೆಯಲಿದೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಪುವೆಂಪು ಪ್ರತಿಷ್ಠಾನ ಹಾಗೂ ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕ ಟ್ರಸ್ಟ್ನ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪುವೆಂಪು ಪ್ರತಿಷ್ಠಾನದ ಅಧ್ಯಕ್ಷ ಕುಂಟಾರು ರವೀಶ ತಂತ್ರಿ ತಿಳಿಸಿದರು.

2026ನೇ ಸಾಲಿನ ಪುವೆಂಪು ಪ್ರಶಸ್ತಿಗೆ ಆಯ್ಕೆಯಾಗಿರುವ ಹಿರಿಯ ಸಾಹಿತಿ, ಚಿಂತಕ ಡಾ.ಬರಗೂರು ರಾಮಚಂದ್ರಪ್ಪ ಅವರಿಗೆ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಪ್ರಶಸ್ತಿ ಪ್ರದಾನ ಮಾಡುವರು. ಬೆಳಿಗ್ಗೆ 10 ಗಂಟೆಗೆ ವಿಧಾನ ಪರಿಷತ್ತಿನ ಸಭಾಪತಿ ಸಲೀಂ ಅಹಮ್ಮದ್ ಕಾರ್ಯಕ್ರಮ ಉದ್ಘಾಟಿಸುವರು. ಇದೇ ಸಂದರ್ಭದಲ್ಲಿ ಎಂ.ಶಾಫಿ ಬಂಡಸಾಲ ಅವರ ಹೃದಯಗೀತೆ ಕವನ ಸಂಕಲನ ಬಿಡುಗಡೆಯಾಗಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಎಸ್.ಪ್ರದೀಪ ಕುಮಾರ ಕಲ್ಕೂರ, ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಕೆ.ತೇಜೋಮಯ, ಸಯ್ಯದ್ ಯು.ಕೆ. ಸೈಫುಲ್ಲ ತಂಗಳ್, ರವಿ ನಾಯ್ಕಾಪು ಸಹಿತ ಮತ್ತಿತರರು ಉಪಸ್ಥಿತರಿದ್ದರು.

