ಉಪ್ಪಿನಂಗಡಿ: ಬಾರ್ ಸಮೀಪ ನಡೆದ ಮಾತಿನ ಚಕಮಕಿಯ ವೇಳೆ ತಲವಾರು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಶೆಣೈ ರಸ್ತೆಯಲ್ಲಿ ಅ.18ರ ರಾತ್ರಿ ನಡೆದಿದೆ.
ಘಟನೆಯ ವೇಳೆ ಮಂಜುನಾಥ್, ವಿಶ್ವನಾಥ ಹಾಗೂ ಮತ್ತೊಬ್ಬ ವ್ಯಕ್ತಿಯ ನಡುವೆ ಮಾತಿನ ಚಕಮಕಿ ನಡೆದು ಗಲಾಟೆ ಉಂಟಾಗಿತ್ತು. ಈ ಸಂದರ್ಭದಲ್ಲಿ ಮಂಜುನಾಥ್ ತನ್ನ ಬಳಿಯಿದ್ದ ತಲವಾರನ್ನು ಸಾರ್ವಜನಿಕವಾಗಿ ಪ್ರದರ್ಶಿಸಿ ಭೀತಿ ಮೂಡಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಪೊಲೀಸರು ಮಂಜುನಾಥ್ ಮತ್ತು ವಿಶ್ವನಾಥ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ, ಕುಡಿದ ಮತ್ತಿನಲ್ಲಿದ್ದ ಮುನ್ನ ಎಂಬಾತ ಮಂಜುನಾಥ್ನ ಮನೆಯವರನ್ನು ಅವಾಚ್ಯವಾಗಿ ನಿಂದಿಸಿದ ಹಿನ್ನೆಲೆಯಲ್ಲಿ ಮಾತಿನ ಚಕಮಕಿ ನಡೆದು ಗಲಾಟೆ ಉಂಟಾಗಿರುವುದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 135/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 194, 296, 351(3) ಹಾಗೂ ಶಸ್ತ್ರಾಸ್ತ್ರ ಕಾಯ್ದೆ 1959ರ ಕಲಂ 25(1B)(b) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಿಚಾರಣೆ ಪೂರ್ಣಗೊಂಡ ಬಳಿಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

