ಕೋಟಾ: ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಕೋಟಾ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ದೆಹಲಿ ಮೂಲಕ ನೇಪಾಳಕ್ಕೆ ಪರಾರಿಯಾಗಲು ಯೋಜಿಸಿದ್ದ ಆರೋಪಿಗಳನ್ನು ಪುಣೆ–ಜೈಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಬಂಧಿಸಲಾಗಿದೆ.
ಬಂಧಿತರನ್ನು ಹರಿಯಾಣದ ರೆಹಾನ್ ಅಲಿಯಾಸ್ ಸುಕ್ಕಾ, ಬಿಹಾರದ ಹೃತಿಕ್ ಕುರ್ಮಿ ಅಲಿಯಾಸ್ ರೋಷನ್ ಹಾಗೂ ಓರ್ವ ಅಪ್ರಾಪ್ತ ಎಂದು ಗುರುತಿಸಲಾಗಿದೆ. ಆರೋಪಿಗಳು ರೈಲಿನ ಸಾಮಾನ್ಯ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಕೋಟಾ ರೈಲು ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಎಂಬ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ರೂಪಿಸಿದ್ದರು. ಅದರಂತೆ ರೈಲಿನಲ್ಲಿ ತಪಾಸಣೆ ನಡೆಸಿದ ಪೊಲೀಸರು ಕೇವಲ 15 ನಿಮಿಷಗಳಲ್ಲೇ ಮೂವರನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ ಎಂದು ಕೋಟಾ ಪೊಲೀಸ್ ವರಿಷ್ಠಾಧಿಕಾರಿ ತೇಜಸ್ವಿನಿ ಗೌತಮ್ ತಿಳಿಸಿದ್ದಾರೆ.

ಪ್ರಾಥಮಿಕ ವಿಚಾರಣೆಯ ವೇಳೆ ರೆಹಾನ್ ಎಂಬ ಆರೋಪಿಯು ಅನಿಲ್ ಪಂಡಿತ್ ಎಂಬಾತನ ಸಂಪರ್ಕದಲ್ಲಿದ್ದ ಎಂಬ ಮಾಹಿತಿ ಲಭಿಸಿದೆ. ಅನಿಲ್ ಪಂಡಿತ್ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನೊಂದಿಗೆ ಸಂಪರ್ಕವಿದೆ ಎನ್ನಲಾಗಿದ್ದು, ಈ ನಂಟಿನ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಗುಂಡಿನ ದಾಳಿಗೆ ಬಳಸಲಾಗಿದೆ ಎನ್ನಲಾದ ಶಸ್ತ್ರಾಸ್ತ್ರಗಳು ಇನ್ನೂ ಪತ್ತೆಯಾಗಿಲ್ಲ. ಅವುಗಳನ್ನು ಎಲ್ಲಿಗೆ ಸಾಗಿಸಲಾಗಿದೆ ಹಾಗೂ ದಾಳಿಯಲ್ಲಿ ಇತರರು ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ಆರೋಪಿಗಳನ್ನು ವಿಚಾರಣೆಗೊಳಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 109(1), 3(5) ಹಾಗೂ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 3 ಮತ್ತು 25ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬಂಧಿತ ಆರೋಪಿಗಳನ್ನು ಮುಂಬೈ ಪೊಲೀಸರಿಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ. ದಾಳಿಯ ಹಿಂದಿನ ಉದ್ದೇಶ, ಶಸ್ತ್ರಾಸ್ತ್ರಗಳ ಮೂಲ ಮತ್ತು ಪ್ರಕರಣದಲ್ಲಿ ಇತರ ವ್ಯಕ್ತಿಗಳ ಪಾತ್ರದ ಕುರಿತು ಮುಂದಿನ ತನಿಖೆಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.


