ಶಿವಮೊಗ್ಗ,: ಮೈಸೂರು ದಸರಾ ಮಾದರಿಯಲ್ಲಿ ಜನಪ್ರಿಯತೆ ಗಳಿಸಿರುವ ಶಿವಮೊಗ್ಗ ದಸರಾ ಜಂಬೂಸವಾರಿಯಲ್ಲಿ ಬುಧವಾರ ಅನಿರೀಕ್ಷಿತ ಘಟನೆ ನಡೆದಿದೆ. ಇದೇ ಮೊದಲ ಬಾರಿಗೆ ಬೆಳ್ಳಿ ಅಂಬಾರಿ ಹೊತ್ತು ಮೆರವಣಿಗೆಯಲ್ಲಿ ಸಾಗುತ್ತಿದ್ದ ಸೋಮಣ್ಣ ಆನೆ ಏಕಾಏಕಿ ಬೆದರಿ ಓಡಿದ್ದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಜಂಬೂಸವಾರಿಯನ್ನು ಅರ್ಧಕ್ಕೆ ನಿಲ್ಲಿಸಲಾಯಿತು.
ನಗರದ ಕೋಟೆ ಶಿವಪ್ಪನಾಯಕ ಅರಮನೆ ಮುಂಭಾಗದಿಂದ ಅಲ್ಲಮಪ್ರಭು ಮೈದಾನದವರೆಗೆ ಮಧ್ಯಾಹ್ನ ಜಂಬೂಸವಾರಿ ಆರಂಭವಾಗಿತ್ತು. ಮೆರವಣಿಗೆಯನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ಈ ವೇಳೆ ಬೆಳ್ಳಿ ಅಂಬಾರಿ ಹೊತ್ತು ಸಾಗುತ್ತಿದ್ದ ಸೋಮಣ್ಣ ಆನೆ ಏಕಾಏಕಿ ಬೆದರಿ ನಿಯಂತ್ರಣ ತಪ್ಪಿ ಓಡತೊಡಗಿತು. ಇದರಿಂದ ನೆರೆದಿದ್ದ ಜನರು ಭಯಭೀತರಾದರು.
ವಾಹನಗಳಿಗೆ ಹಾನಿ, ಅಂಬಾರಿ ಜಖಂ
ಆನೆ ಓಡಿದ ರಭಸಕ್ಕೆ ಒಂದು ಕಾರು ಸೇರಿದಂತೆ ಎರಡು-ಮೂರು ಬೈಕ್ಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಆನೆಯ ಮೇಲಿದ್ದ ಚಾಮುಂಡೇಶ್ವರಿ ಅಂಬಾರಿ ಕೆಳಗೆ ಬಿದ್ದು ಸಂಪೂರ್ಣವಾಗಿ ಹಾನಿಗೊಂಡಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.
ಆನೆಯನ್ನು ನಿಯಂತ್ರಣಕ್ಕೆ ತರಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸಪಟ್ಟರು. ಬಳಿಕ ಅರವಳಿಕೆ ಮದ್ದು ನೀಡಿ ಆನೆಯನ್ನು ನಿಯಂತ್ರಿಸಲಾಯಿತು. ಸ್ವಲ್ಪ ದೂರ ಓಡಿದ ಸೋಮಣ್ಣ ಆನೆ ಮತ್ತೆ ವಾಪಸ್ಸಾಗಿದೆ ಎಂದು ತಿಳಿದುಬಂದಿದೆ.

ಇದೇ ಮೊದಲ ಬಾರಿಗೆ ಅಂಬಾರಿ ಹೊತ್ತಿದ್ದ ಸೋಮಣ್ಣ
ಈ ಬಾರಿಯ ಶಿವಮೊಗ್ಗ ದಸರಾ ಜಂಬೂಸವಾರಿಯಲ್ಲಿ ಅಂಬಾರಿ ಹೊರುವ ಆನೆಯ ಆಯ್ಕೆಯಲ್ಲಿ ಬದಲಾವಣೆ ಮಾಡಲಾಗಿತ್ತು. ಹಲವು ವರ್ಷಗಳಿಂದ ಈ ಜವಾಬ್ದಾರಿ ನಿರ್ವಹಿಸುತ್ತಿದ್ದ ಸಾಗರ ಆನೆಯ ಬದಲಿಗೆ ಸೋಮಣ್ಣ ಆನೆಗೆ ಅವಕಾಶ ನೀಡಲಾಗಿತ್ತು. ಅದರಂತೆ ಸೋಮಣ್ಣ ಇದೇ ಮೊದಲ ಬಾರಿಗೆ ಬೆಳ್ಳಿ ಅಂಬಾರಿ ಹೊತ್ತು ಮೆರವಣಿಗೆಯಲ್ಲಿ ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಘಟನೆಯ ಹಿನ್ನೆಲೆಯಲ್ಲಿ ಜಂಬೂಸವಾರಿಯನ್ನು ಅರ್ಧದಲ್ಲೇ ಸ್ಥಗಿತಗೊಳಿಸಲಾಯಿತು. ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ ಈ ಘಟನೆಯಿಂದ ದಸರಾ ಸಂಭ್ರಮಕ್ಕೆ ತಾತ್ಕಾಲಿಕವಾಗಿ ಅಡ್ಡಿಯಾಯಿತು.

