ಬಂಟ್ವಾಳ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ವಗ್ಗದಲ್ಲಿ ನಡೆದಿದ್ದು, ಈ ಸಂಬಂಧ ಮೃತ ಮಹಿಳೆಯ ಪತಿ ಸಂಜೀವಕುಮಾರ್ (36) ಎಂಬವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.
ಮೃತ ಮಹಿಳೆಯನ್ನು ಬೆಳಗಾವಿ ಜಿಲ್ಲೆಯ ಅಥಣಿ ನಿವಾಸಿ ಸುನೀತಾ ಮಹಾದೇವ್ ದೇಸಂಗಿ (34) ಎಂದು ಗುರುತಿಸಲಾಗಿದೆ. ಇವರನ್ನು ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಿವಾಸಿ ಸಂಜೀವಕುಮಾರ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿ ಬಂಟ್ವಾಳದ ವಗ್ಗದಲ್ಲಿ ವಾಸವಾಗಿದ್ದರು ಎನ್ನಲಾಗಿದೆ.
ದಂಪತಿಯ ನಡುವೆ ವೈವಾಹಿಕ ಕಲಹ ಉಂಟಾಗಿದ್ದ ಹಿನ್ನೆಲೆಯಲ್ಲಿ ಸಂಬಂಧಿಕರು ಮಧ್ಯಸ್ಥಿಕೆ ವಹಿಸಿ ರಾಜಿ ಸಂಧಾನ ನಡೆಸಿದ್ದರು. ಹೆರಿಗೆಯಾದ ಬಳಿಕ ತವರು ಮನೆಯಲ್ಲಿದ್ದ ಸುನೀತಾ ಅವರನ್ನು ಅ.4ರಂದು ಪತಿ ಬಂಟ್ವಾಳದ ತಮ್ಮ ಮನೆಗೆ ಕರೆತಂದಿದ್ದರು.
ಅ.22ರಂದು ಸುನೀತಾ ಅವರು ತಮ್ಮ ಸಹೋದರ ಅರುಣ್ ಮಹಾದೇವ್ ದೇಸಂಗಿ (26) ಅವರಿಗೆ ದೂರವಾಣಿ ಕರೆ ಮಾಡಿ, ಪತಿ ಕಿರುಕುಳ ನೀಡುತ್ತಿದ್ದು, ಹಲ್ಲೆ ನಡೆಸುತ್ತಿರುವುದಾಗಿ ತಿಳಿಸಿದ್ದರು ಎನ್ನಲಾಗಿದೆ.
ಮರುದಿನ ಅ.23ರ ಮುಂಜಾನೆ ಸಂಜೀವಕುಮಾರ್ ಅವರು ಅರುಣ್ ಅವರಿಗೆ ಕರೆ ಮಾಡಿ, ಸುನೀತಾ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸುತ್ತಿರುವುದಾಗಿ ಮಾಹಿತಿ ನೀಡಿದ್ದರು. ಬಳಿಕ ಸ್ಥಳಕ್ಕೆ ಬಂದ ಅರುಣ್ ಅವರು ಸುನೀತಾ ಮೃತಪಟ್ಟಿರುವುದನ್ನು ಗಮನಿಸಿದ್ದಾರೆ. ಮೃತದೇಹವನ್ನು ಪರಿಶೀಲಿಸಿದಾಗ ಹಲ್ಲೆಯ ಗಾಯಗಳು ಹಾಗೂ ರಕ್ತದ ಗುರುತುಗಳು ಕಂಡುಬಂದಿದ್ದವು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅ.22ರ ರಾತ್ರಿ ಮತ್ತು ಅ.23ರ ಮುಂಜಾನೆಯ ನಡುವೆ ಸುನೀತಾ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಅರುಣ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಈ ದೂರಿನ ಆಧಾರದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 142/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS), 2023ರ ಕಲಂ 103ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂಜೀವಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು

