ಮಂಗಳೂರು, ಅ.25: ಮಂಗಳೂರು ನಗರ ದಕ್ಷಿಣ ಹಾಗೂ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಆರು ದ್ವಿಚಕ್ರ ವಾಹನ ಕಳವು ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು, ಮೂವರು ಬಾಲಕರು ಸೇರಿದಂತೆ ಒಟ್ಟು ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಂದ ಕಳವು ಮಾಡಲಾಗಿದ್ದ ಆರು ಬೈಕ್ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಮೂರು ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು ಒಂಬತ್ತು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಅಂದಾಜು ಮೌಲ್ಯ ಸುಮಾರು 4.50 ಲಕ್ಷ ರೂ. ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ವೆಲೆನ್ಸಿಯಾದ ಡಾನ್ ಬಾಸ್ಕೋ ಹಾಸ್ಟೆಲ್ ಬಳಿ ಅಕ್ಟೋಬರ್ 12ರಂದು ನಿಲ್ಲಿಸಿದ್ದ ಕೆಟಿಎಂ ಡ್ಯೂಕ್ ಬೈಕ್, ಅಕ್ಟೋಬರ್ 19ರಂದು ಜಪ್ಪು ಮಾರ್ಕೆಟ್ ಬಳಿ ನಿಲ್ಲಿಸಿದ್ದ ಯಮಹಾ ಎಫ್ಝಡ್ ಬೈಕ್, ಅಕ್ಟೋಬರ್ 21ರಂದು ಅತ್ತಾವರದ ಕೆಎಂಸಿ ಆಸ್ಪತ್ರೆ ಸಮೀಪದ ದುರ್ಗಾ ಹೋಟೆಲ್ ಮುಂಭಾಗದಲ್ಲಿದ್ದ ಬಜಾಜ್ ಡಿಸ್ಕವರಿ ಬೈಕ್ ಹಾಗೂ ಅಕ್ಟೋಬರ್ 22ರಂದು ಹೊಯಿಗೆ ಬಜಾರ್ನ ಭಗವತಿ ಅಪಾರ್ಟ್ಮೆಂಟ್ ಕೆಳಗೆ ನಿಲ್ಲಿಸಿದ್ದ ಮತ್ತೊಂದು ಕೆಟಿಎಂ ಡ್ಯೂಕ್ ಬೈಕ್ ಕಳವಾಗಿತ್ತು.
ಇದೇ ರೀತಿ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ದೇರಳಕಟ್ಟೆಯ ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ ಬಳಿ ಅಕ್ಟೋಬರ್ 18ರಂದು ನಿಲ್ಲಿಸಿದ್ದ ರಾಯಲ್ ಎನ್ಫೀಲ್ಡ್ ಬುಲೆಟ್ ಹಾಗೂ ಕುತ್ತಾರ್ನ ಪಂಡಿತ್ ಹೌಸ್ ಬಳಿ ಅಕ್ಟೋಬರ್ 21ರಂದು ನಿಲ್ಲಿಸಿದ್ದ ಯಮಹಾ ಎಫ್ಝಡ್ ಬೈಕ್ ಕಳವಾಗಿರುವ ಬಗ್ಗೆ ದೂರು ದಾಖಲಾಗಿತ್ತು. ಈ ಸಂಬಂಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ನಾಲ್ಕು ಹಾಗೂ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು.
ಪ್ರಕರಣಗಳನ್ನು ಪತ್ತೆಹಚ್ಚಲು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಮತ್ತು ಅಪರಾಧ ಪತ್ತೆ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡವನ್ನು ರಚಿಸಲಾಗಿತ್ತು. ತಂಡವು ಮಾಹಿತಿ ಸಂಗ್ರಹಿಸಿ ತನಿಖೆ ನಡೆಸಿ ಏಳು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.
ವಿಚಾರಣೆ ವೇಳೆ, ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಬೆಲೆಬಾಳುವ ದ್ವಿಚಕ್ರ ವಾಹನಗಳನ್ನು ಕಳವು ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಸಂಗತಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸರಗಳ್ಳತನ ಸೇರಿದಂತೆ ಇತರ ಅಪರಾಧ ಕೃತ್ಯಗಳಲ್ಲಿಯೂ ತೊಡಗಿಸಿಕೊಂಡಿರುವ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ವಶಕ್ಕೆ ಪಡೆದವರಲ್ಲಿ ಮೂವರು ಕಾನೂನಿನೊಂದಿಗೆ ಸಂಘರ್ಷಕ್ಕೊಳಗಾದ ಬಾಲಕರಾಗಿದ್ದು, ಉಳಿದ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವೇಂದ್ರ ಬೈಂದೂರು ಅವರ ನೇತೃತ್ವದಲ್ಲಿ ಪಿಎಸ್ಐ ಮಾರುತಿ ಹಾಗೂ ಅಪರಾಧ ಪತ್ತೆ ವಿಭಾಗದ ಸಿಬ್ಬಂದಿಗಳಾದ ಲಕ್ಷ್ಮಣ ಸಾಲೋಟಗಿ, ಪುಟ್ಟರಾಮ್, ಸಾಗರ ದೇವಕತ್ತಿ ಮತ್ತು ಆಂಜನೇಯ ಕೆ.ಎಸ್. ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಠಾಣೆಯ ಇತರ ಅಧಿಕಾರಿ ಮತ್ತು ಸಿಬ್ಬಂದಿ ಸಹಕರಿಸಿದ್ದರು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರ ಪ್ರಕಟಣೆ ತಿಳಿಸಿದೆ.

