ಮಂಗಳೂರು: ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಬೃಹತ್ ಪಾದಯಾತ್ರೆ ಹಾಗೂ ‘ನಮ್ಮ ಹಕ್ಕು ನಮಗೆ ನೀಡಿ’ ಪ್ರತಿಭಟನಾ ಸಭೆಗಳನ್ನು ಆಯೋಜಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಹೋರಾಟದ ಸಂಚಾಲಕ ಕಿಶೋರ್ ಕುಮಾರ್ ಪುತ್ತೂರು ತಿಳಿಸಿದ್ದಾರೆ.
ಗ್ರಾಮ ಪಂಚಾಯತಿಗಳಿಗೆ ಅನುದಾನ ಬಿಡುಗಡೆ ವಿಳಂಬ, ಸಿಬ್ಬಂದಿ ಕೊರತೆ, ಖಾಲಿ ಹುದ್ದೆಗಳ ನೇಮಕಾತಿ, ಕನಿಷ್ಠ ವೇತನ ಜಾರಿ ಹಾಗೂ ವಿವಿಧ ಕಲ್ಯಾಣ ಯೋಜನೆಗಳ ಸಹಾಯಧನ ಬಿಡುಗಡೆ ಸೇರಿದಂತೆ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಈ ಹೋರಾಟ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಸಾರ್ವಜನಿಕರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಸಿಬ್ಬಂದಿ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಂಬಲ ನೀಡುವಂತೆ ಅವರು ಮನವಿ ಮಾಡಿದ್ದಾರೆ.
ಗ್ರಾಮ ಪಂಚಾಯತಿಗಳಿಗೆ ಅಗತ್ಯ ಅನುದಾನ ದೊರೆಯದಿರುವುದರಿಂದ ಅಭಿವೃದ್ಧಿ ಕಾಮಗಾರಿಗಳು ಮತ್ತು ಮೂಲಸೌಕರ್ಯ ಯೋಜನೆಗಳಿಗೆ ತೊಂದರೆಯಾಗುತ್ತಿದೆ. 2024ರಲ್ಲಿ ಆರಂಭಿಸಲಾದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳದಿರುವುದು ಆಡಳಿತದ ಮೇಲೆ ಪರಿಣಾಮ ಬೀರಿದೆ. ಪಂಚಾಯತ್ ಸಿಬ್ಬಂದಿಗೆ ಪರಿಷ್ಕೃತ ಕನಿಷ್ಠ ವೇತನ ಜಾರಿಗೊಳಿಸುವಲ್ಲಿಯೂ ವಿಳಂಬವಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಇ-ಸ್ವತ್ತು ಮತ್ತು ಪಂಚತಂತ್ರ ತಂತ್ರಾಂಶಗಳಲ್ಲಿನ ಸರ್ವರ್ ಸಮಸ್ಯೆ ಹಾಗೂ ತಾಂತ್ರಿಕ ದೋಷಗಳಿಂದ ಸಾರ್ವಜನಿಕರು ಆಸ್ತಿ ದಾಖಲೆ ಸೇರಿದಂತೆ ಅಗತ್ಯ ಸೇವೆಗಳನ್ನು ಪಡೆಯಲು ಪರದಾಡುವಂತಾಗಿದೆ. ಈ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಜನರಿಗೆ ಸಕಾಲದಲ್ಲಿ ಸೇವೆ ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಬಸವ ವಸತಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ನಿವಾಸ ಯೋಜನೆಗಳಡಿ ಕಳೆದ ಮೂರು ವರ್ಷಗಳಿಂದ ಮನೆಗಳನ್ನು ಮಂಜೂರು ಮಾಡದಿರುವುದರಿಂದ ವಸತಿರಹಿತ ಕುಟುಂಬಗಳು ಸಂಕಷ್ಟದಲ್ಲಿವೆ. ಅರ್ಹ ಫಲಾನುಭವಿಗಳಿಗೆ ಕೂಡಲೇ ಮನೆಗಳನ್ನು ಮಂಜೂರು ಮಾಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ವಿನ್ಯಾಸ ಮತ್ತು ಕಟ್ಟಡ ನಕ್ಷೆಗಳಿಗೆ ಅನುಮೋದನೆ ನೀಡುವ ಅಧಿಕಾರವನ್ನು ಪುನಃ ಗ್ರಾಮ ಪಂಚಾಯತಿಗಳಿಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
2025–26ನೇ ಸಾಲಿನ ಬಜೆಟ್ನಲ್ಲಿ ಘೋಷಿಸಲಾದ ಪ್ರಗತಿಪಥ ರಸ್ತೆ ಅಭಿವೃದ್ಧಿ ಯೋಜನೆ ಸೇರಿದಂತೆ ಗ್ರಾಮ ಪಂಚಾಯತಿಗಳ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಗ್ರಾಮೀಣ ಪ್ರದೇಶಗಳ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಸಹಾಯಧನ, ವೃದ್ಧಾಪ್ಯ ವೇತನ ಮತ್ತು ವಿಧವಾ ವೇತನದ ಹಣ ಕಳೆದ ಆರು ತಿಂಗಳಿಂದ ಬಿಡುಗಡೆಯಾಗಿಲ್ಲ ಎಂಬ ಸಮಸ್ಯೆಯನ್ನೂ ಅವರು ಪ್ರಸ್ತಾಪಿಸಿದ್ದಾರೆ. ಬಾಕಿ ಇರುವ ಸಹಾಯಧನ ಮತ್ತು ಪಿಂಚಣಿಗಳನ್ನು ತಕ್ಷಣ ಬಿಡುಗಡೆಗೊಳಿಸಿ ಫಲಾನುಭವಿಗಳಿಗೆ ಆರ್ಥಿಕ ನೆರವು ಒದಗಿಸಬೇಕು ಎಂದು ತಿಳಿಸಿದ್ದಾರೆ.
ನಗರ ಸ್ಥಳೀಯ ಸಂಸ್ಥೆಗಳಲ್ಲಿಯೂ ಸಿಬ್ಬಂದಿ ಕೊರತೆ, ಕನಿಷ್ಠ ವೇತನ ಜಾರಿ ವಿಳಂಬ ಹಾಗೂ ಕಟ್ಟಡ ಪರವಾನಗಿಗಾಗಿ ಬಳಸುವ ಎಲ್ಬಿಪಿಎಎಸ್ (LBPAS) ತಂತ್ರಾಂಶದಲ್ಲಿನ ತಾಂತ್ರಿಕ ದೋಷಗಳಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಬಾಕಿ ಉಳಿದಿರುವ ಕಟ್ಟಡ ಪರವಾನಗಿ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಇದರೊಂದಿಗೆ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳನ್ನು ಶೀಘ್ರವಾಗಿ ನಡೆಸಿ, ಸ್ಥಳೀಯ ಆಡಳಿತದಲ್ಲಿ ಪ್ರಜಾಪ್ರಭುತ್ವದ ಆಶಯವನ್ನು ಬಲಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಜನರ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು ಹಾಗೂ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳನ್ನು ಬಲಪಡಿಸುವ ಉದ್ದೇಶದಿಂದ ಈ ಹೋರಾಟ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರ ಹಕ್ಕುಗಳ ರಕ್ಷಣೆಗಾಗಿ ಆಯೋಜಿಸಿರುವ ಪಾದಯಾತ್ರೆ ಮತ್ತು ಪ್ರತಿಭಟನಾ ಸಭೆಗಳಲ್ಲಿ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕಿಶೋರ್ ಕುಮಾರ್ ಪುತ್ತೂರು ಮನವಿ ಮಾಡಿದ್ದಾರೆ.
‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ — ನಮ್ಮ ಹಕ್ಕು ನಮಗೆ ನೀಡಿ’ ಎಂಬ ಘೋಷಣೆಯೊಂದಿಗೆ ನಡೆಯಲಿರುವ ಈ ಹೋರಾಟದ ಮೂಲಕ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

