ಮಂಗಳೂರು: ಪಂಚಾಯತ್ಗಳಿಗೆ ಅನುದಾನದ ಕೊರತೆ, ಸರ್ಕಾರಿ ಶಾಲೆಗಳ ಅಭಿವೃದ್ಧಿ ಕುಂಠಿತ ಹಾಗೂ ವಿವಿಧ ಯೋಜನೆಗಳ ಅನುಷ್ಠಾನದಲ್ಲಿನ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದರು.
ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲದ ವತಿಯಿಂದ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಾಜ್ಯ ಸರ್ಕಾರದ ನೀತಿಗಳನ್ನು ವಿರೋಧಿಸಿ ‘ನಮ್ಮ ಹಕ್ಕು ನಮಗೆ ನೀಡಿ’ ಎಂಬ ಘೋಷಣೆಯೊಂದಿಗೆ ಬೃಹತ್ ಹಕ್ಕೊತ್ತಾಯ ಸಭೆ ನಡೆಯಿತು. ಸಭೆಯಲ್ಲಿ ಶಾಸಕ ಡಾ.ವೈ.ಭರತ್ ಶೆಟ್ಟಿ ಹಾಗೂ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿ, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಮತ್ತು ಜನಸಾಮಾನ್ಯರ ಸಮಸ್ಯೆಗಳ ಕುರಿತು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರಿ ಶಾಲೆಗಳಿಗೆ ಅನುದಾನವಿಲ್ಲ: ಭರತ್ ಶೆಟ್ಟಿ ಆರೋಪ
ಶಾಸಕ ಡಾ.ವೈ.ಭರತ್ ಶೆಟ್ಟಿ ಮಾತನಾಡಿ, ರಾಜ್ಯದಲ್ಲಿ ನೋಂದಣಿ ಶುಲ್ಕ ಹಾಗೂ ತೆರಿಗೆಗಳ ಹೆಚ್ಚಳದಿಂದ ಜನಸಾಮಾನ್ಯರಿಗೆ ಆರ್ಥಿಕ ಹೊರೆ ಹೆಚ್ಚಾಗಿದೆ ಎಂದು ಆರೋಪಿಸಿದರು. ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಿಗೆ ಹೊಸ ಕೊಠಡಿಗಳ ನಿರ್ಮಾಣ ಸೇರಿದಂತೆ ಮೂಲಸೌಕರ್ಯ ಒದಗಿಸುವಲ್ಲಿ ಸರ್ಕಾರ ನಿರೀಕ್ಷಿತ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು.
ಶಾಲೆಗಳಿಗೆ ಕುರ್ಚಿ, ಕಂಪ್ಯೂಟರ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಎಂಆರ್ಪಿಎಲ್, ಎನ್ಎಂಪಿಎ ಮತ್ತು ಎಂಸಿಎಫ್ನಂತಹ ಸಂಸ್ಥೆಗಳ ಸಿಎಸ್ಆರ್ ಅನುದಾನವನ್ನು ಅವಲಂಬಿಸಬೇಕಾದ ಪರಿಸ್ಥಿತಿ ಇದೆ ಎಂದು ಹೇಳಿದರು. ಪೊಲೀಸ್ ಇಲಾಖೆಯಲ್ಲಿನ ಭ್ರಷ್ಟಾಚಾರ ಹಾಗೂ ಸರ್ಕಾರಿ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆಯೂ ಅವರು ಅಸಮಾಧಾನ ವ್ಯಕ್ತಪಡಿಸಿದರು. ಮುಂದಿನ ಚುನಾವಣೆಯಲ್ಲಿ ಜನರು ಸರ್ಕಾರದ ಕಾರ್ಯವೈಖರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.
ಪಂಚಾಯತ್ಗಳ ಅಭಿವೃದ್ಧಿಗೆ ಅನುದಾನದ ಕೊರತೆ: ಕಿಶೋರ್ ಕುಮಾರ್
ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಾದ ಅನುದಾನವನ್ನು ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅವ್ಯವಹಾರವನ್ನೂ ಪ್ರಸ್ತಾಪಿಸಿದ ಅವರು, ಗ್ರಾಮ ಪಂಚಾಯತ್ಗಳಿಗೆ ಅಗತ್ಯ ಅನುದಾನ ದೊರೆಯದ ಕಾರಣ ರಸ್ತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ತೊಂದರೆಯಾಗುತ್ತಿದೆ ಎಂದರು.
ರಾಜ್ಯದ ವಿವಿಧ ಇಲಾಖೆಗಳಲ್ಲಿ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ ನೇಮಕಾತಿ ಪ್ರಕ್ರಿಯೆ ಸಮರ್ಪಕವಾಗಿ ನಡೆಯುತ್ತಿಲ್ಲ. ವಸತಿ ಯೋಜನೆ, ವೃದ್ಧಾಪ್ಯ ವೇತನ ಮತ್ತು ವಿಧವಾ ವೇತನ ಸೇರಿದಂತೆ ಹಲವು ವಿಚಾರಗಳಲ್ಲಿ ಜನರು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಹೇಳಿದರು. ಗ್ರಾಮ ಪಂಚಾಯತ್ ಮಟ್ಟದಿಂದಲೇ ಸರ್ಕಾರದ ನೀತಿಗಳ ವಿರುದ್ಧ ಜನಜಾಗೃತಿ ಮೂಡಿಸಿ, ಜನರ ಹಕ್ಕುಗಳಿಗಾಗಿ ಹೋರಾಟ ಮುಂದುವರಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಂಗಳೂರು ನಗರ ಉತ್ತರ ಮಂಡಲದ ಅಧ್ಯಕ್ಷ ರಾಜೇಶ್ ಕೊಟ್ಟಾರಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

