ಕಾಸರಗೋಡು: ಗಡಿನಾಡು ಕಾಸರಗೋಡಿನಲ್ಲಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯ ವೈಭವವನ್ನು ಅನಾವರಣಗೊಳಿಸುವ ಉದ್ದೇಶದಿಂದ ಕೇರಳ ರಾಜ್ಯ 8ನೇ ಕನ್ನಡ ಸಮ್ಮೇಳನ-2026, ಕೇರಳ-ಕರ್ನಾಟಕ ಉತ್ಸವ ಹಾಗೂ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಉತ್ಸವವನ್ನು ನವೆಂಬರ್ 28 ಮತ್ತು 29ರಂದು ಕನ್ನಡ ಗ್ರಾಮದಲ್ಲಿ ಆಯೋಜಿಸಲಾಗಿದೆ.
ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕನ್ನಡ ಗ್ರಾಮ, ಕಾಸರಗೋಡು ಇದರ ನೇತೃತ್ವದಲ್ಲಿ ನಡೆಯಲಿರುವ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಅಂತರರಾಜ್ಯ ಮಟ್ಟದ ಸುಮಾರು 2,000 ಪ್ರತಿನಿಧಿಗಳನ್ನು ಆಹ್ವಾನಿಸಲಾಗುತ್ತಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ತಿಳಿಸಿದರು. ಸಮ್ಮೇಳನದ ಸ್ವಾಗತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಳೆದ 36 ವರ್ಷಗಳಿಂದ ಕೇರಳ ರಾಜ್ಯದ ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಐತಿಹಾಸಿಕ ಪರಂಪರೆಯನ್ನು ದೇಶದಾದ್ಯಂತ ಪರಿಚಯಿಸುವ ಕಾರ್ಯದಲ್ಲಿ ಪ್ರತಿಷ್ಠಾನ ತೊಡಗಿಸಿಕೊಂಡಿದೆ. ಕನ್ನಡಿಗರು, ಸಾಹಿತಿಗಳು, ಕಲಾವಿದರು ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ಸಾಂಸ್ಕೃತಿಕ ವಿನಿಮಯಕ್ಕೆ ಅವಕಾಶ ಕಲ್ಪಿಸುವುದು ಸಮ್ಮೇಳನದ ಪ್ರಮುಖ ಉದ್ದೇಶವಾಗಿದೆ.

ಗಣ್ಯರಿಂದ ಉದ್ಘಾಟನೆ
ಖ್ಯಾತ ಸಾಹಿತಿ, ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯಿಲಿ ಸಮ್ಮೇಳನ ಮತ್ತು ಕೇರಳ-ಕರ್ನಾಟಕ ಉತ್ಸವವನ್ನು ಉದ್ಘಾಟಿಸಲಿದ್ದಾರೆ. ಕೇರಳ ಮತ್ತು ಕರ್ನಾಟಕದ ಸಚಿವರು, ಲೋಕಸಭಾ ಸದಸ್ಯರು, ಶಾಸಕರು ಹಾಗೂ ಕರ್ನಾಟಕದ ಮಾಜಿ ಸಚಿವ ಜೆ.ಕೃಷ್ಣ ಪಾಲೆಮಾರ್ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕರ್ನಾಟಕ ಮತ್ತು ಕೇರಳದ ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು, ಕುಲಸಚಿವರು, ಇಲಾಖಾ ಮುಖ್ಯಸ್ಥರು, ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಾಗೂ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಪ್ರತಿನಿಧಿಗಳು, ವಿವಿಧ ಅಕಾಡೆಮಿಗಳ ಅಧ್ಯಕ್ಷರು ಮತ್ತು ಸರ್ಕಾರಿ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯ ಸಂಗಮ
ಸಮ್ಮೇಳನದ ಅಂಗವಾಗಿ ಅಂತರರಾಜ್ಯ ಮಟ್ಟದ ಬಹುಭಾಷಾ ಕವಿಗೋಷ್ಠಿ, ಚುಟುಕು ಕವಿಗೋಷ್ಠಿ, ಕಾಲೇಜು ವಿದ್ಯಾರ್ಥಿಗಳ ಕವಿಗೋಷ್ಠಿ, ಮಕ್ಕಳ ಕವಿಗೋಷ್ಠಿ ಹಾಗೂ ಮಕ್ಕಳ ಸಾಹಿತ್ಯ ಗೋಷ್ಠಿಗಳನ್ನು ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಮತ್ತು ಕೇರಳ ರಾಜ್ಯ ಘಟಕದ ಆಶ್ರಯದಲ್ಲಿ ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಉತ್ಸವ ನಡೆಯಲಿದೆ.
ಕರ್ನಾಟಕ ಸರ್ಕಾರದ ವಿವಿಧ ಅಕಾಡೆಮಿಗಳ ಸಹಯೋಗದಲ್ಲಿ ಬಹುಭಾಷಾ ಬಾಂಧವ್ಯ ಗೋಷ್ಠಿ ಹಾಗೂ ಎಂಟು ರಾಜ್ಯಗಳ ಕನ್ನಡ ಸಂಘಟನೆಗಳ ಪದಾಧಿಕಾರಿಗಳ ಭಾಗವಹಿಸುವಿಕೆಯಲ್ಲಿ ಗಡಿನಾಡು, ಹೊರನಾಡು ಮತ್ತು ಅನಿವಾಸಿ ಭಾರತೀಯ ಕನ್ನಡಿಗರ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣವೂ ನಡೆಯಲಿದೆ. ಹೊಸ ಕೃತಿಗಳು ಮತ್ತು ಸ್ಮರಣ ಸಂಚಿಕೆಗಳ ಬಿಡುಗಡೆ, ಅಂತರರಾಜ್ಯ ಮಾಧ್ಯಮ ಗೋಷ್ಠಿಯೂ ಕಾರ್ಯಕ್ರಮದ ಭಾಗವಾಗಿವೆ.
ಕರಕುಶಲ ವಸ್ತುಗಳ ಪ್ರದರ್ಶನ, ಚಿತ್ರಕಲಾ ಮೇಳ, ಪುಸ್ತಕ ಮೇಳ, ಆಹಾರ ಮೇಳ, ಕೃಷಿ ಮೇಳ, ವ್ಯಂಗ್ಯಚಿತ್ರ ಮತ್ತು ಛಾಯಾಚಿತ್ರ ಪ್ರದರ್ಶನಗಳ ಜೊತೆಗೆ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ‘ನಮ್ಮೂರ ಕನ್ನಡ ಜಾತ್ರೆ’ಯನ್ನು ಆಯೋಜಿಸಲಾಗುತ್ತದೆ.

ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು
ಕೇರಳ ಮತ್ತು ಕರ್ನಾಟಕದ ವಿವಿಧ ಕಲಾಪ್ರಕಾರಗಳಿಗೆ ವೇದಿಕೆ ಕಲ್ಪಿಸಲಾಗುತ್ತಿದ್ದು, ಸಮೂಹ ನೃತ್ಯ, ಜಾನಪದ ನೃತ್ಯ, ಭರತನಾಟ್ಯ, ನೃತ್ಯರೂಪಕ, ಸುಗಮ ಸಂಗೀತ, ದಾಸ ಸಂಕೀರ್ತನೆ, ಭಾವಗೀತೆ, ಚಲನಚಿತ್ರ ಗೀತೆಗಳು ಹಾಗೂ ದೇಶಭಕ್ತಿ ಗೀತೆಗಳ ಸಮೂಹ ಗಾಯನ ನಡೆಯಲಿದೆ. ಐತಿಹಾಸಿಕ, ಚಾರಿತ್ರಿಕ ಮತ್ತು ಸಾಮಾಜಿಕ ನಾಟಕಗಳ ಜೊತೆಗೆ ವಿವಿಧ ಜಾನಪದ ಕಲೆಗಳ ಪ್ರದರ್ಶನವೂ ಇರಲಿದೆ.
ಕೃಷಿ, ಖಾದಿ, ಗ್ರಾಮೀಣಾಭಿವೃದ್ಧಿ, ಗುಡಿ ಕೈಗಾರಿಕೆ, ಸ್ವಯಂ ಉದ್ಯೋಗ, ಬ್ಯಾಂಕಿಂಗ್ ಮತ್ತು ವಿವಿಧ ಉದ್ಯಮ ಸಂಸ್ಥೆಗಳ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳು ಸಮ್ಮೇಳನಕ್ಕೆ ವಿಶೇಷ ಮೆರುಗು ನೀಡಲಿವೆ.
ಸಾಧಕರಿಗೆ ವಿವಿಧ ಪ್ರಶಸ್ತಿ ಪ್ರದಾನ
ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಕರಾವಳಿ ರತ್ನ ಪ್ರಶಸ್ತಿ, ಕೇರಳ-ಕರ್ನಾಟಕ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ರಾಷ್ಟ್ರೀಯ ಪ್ರಶಸ್ತಿ, ರಾಜ್ಯ ಪ್ರಶಸ್ತಿ ಹಾಗೂ 14 ಸಮುದಾಯಗಳ ಸಾಧಕರಿಗೆ ಸಾಧಕ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.
ಕೇರಳ, ಕರ್ನಾಟಕ ಹಾಗೂ ಭಾರತದ ವಿವಿಧ ರಾಜ್ಯಗಳಿಂದ ಕನ್ನಡ ಸಂಘಟನೆಗಳ ಪ್ರತಿನಿಧಿಗಳು, ಸಾಹಿತಿಗಳು, ಕವಿಗಳು, ಕಲಾವಿದರು, ಅಧ್ಯಾಪಕರು, ವಿದ್ಯಾರ್ಥಿಗಳು, ಕೃಷಿಕರು, ಉದ್ಯಮಿಗಳು ಮತ್ತು ಮಾಧ್ಯಮ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಗಲ್ಫ್ ರಾಷ್ಟ್ರಗಳು ಸೇರಿದಂತೆ ವಿದೇಶಗಳಲ್ಲಿರುವ ಅನಿವಾಸಿ ಭಾರತೀಯ ಕನ್ನಡಿಗರೂ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.
₹10 ಕೋಟಿ ವೆಚ್ಚದ ಕೇರಳ-ಕರ್ನಾಟಕ ಭವನಕ್ಕೆ ಶಿಲಾನ್ಯಾಸ
ಸಮ್ಮೇಳನದ ಪ್ರಮುಖ ಆಕರ್ಷಣೆಯಾಗಿ ಕಾಸರಗೋಡು ಕನ್ನಡ ಗ್ರಾಮದಲ್ಲಿ ಸುಮಾರು ₹10 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕೇರಳ-ಕರ್ನಾಟಕ ಭವನಕ್ಕೆ ಭೂಮಿಪೂಜೆ ಮತ್ತು ಶಿಲಾನ್ಯಾಸ ನೆರವೇರಿಸಲಾಗುತ್ತದೆ.
ಬೆಂಗಳೂರು ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಜಗದ್ಗುರು ಶ್ರೀ ಶ್ರೀ ಶ್ರೀ ನಿಶ್ವಲಾನಂದ ಮಹಾಸ್ವಾಮೀಜಿ, ಮೂಡುಬಿದಿರೆಯ ದಿಗಂಬರ ಜೈನ ಮಠದ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ, ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ, ಮಾಣಿಲದ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹಾಗೂ ಉಪ್ಪಳ ಕೊಂಡೆವೂರಿನ ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಗಡಿನಾಡು ಕಾಸರಗೋಡಿನಲ್ಲಿ ಕನ್ನಡ ಭಾಷೆ, ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯ ಸಮಗ್ರ ವೈಭವವನ್ನು ಪ್ರತಿಬಿಂಬಿಸುವ ಈ ಸಮ್ಮೇಳನವು ಕೇರಳ ಮತ್ತು ಕರ್ನಾಟಕದ ನಡುವಿನ ಸಾಂಸ್ಕೃತಿಕ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆಯಿದೆ.
ಹೆಚ್ಚಿನ ಮಾಹಿತಿಗಾಗಿ: ಶಿವರಾಮ ಕಾಸರಗೋಡು, ಅಧ್ಯಕ್ಷರು, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕನ್ನಡ ಗ್ರಾಮ, ಪಾರೆಕಟ್ಟೆ-ಕನ್ನಡ ಗ್ರಾಮ ರಸ್ತೆ, ಕಾಸರಗೋಡು-671121. ಮೊಬೈಲ್: 9448572016, 9901951965.

