ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿ, ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪುತ್ತೂರಿನಲ್ಲಿ ಕಾರ್ಯನಿರ್ವಹಣೆ) ತೀರ್ಪು ನೀಡಿದೆ.
ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ರವಿ ಅಲಿಯಾಸ್ ರವೀಂದ್ರ ಆಚಾರ್ಯ (32) ಶಿಕ್ಷೆಗೊಳಗಾದ ಆರೋಪಿ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2018ರಲ್ಲಿ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 208/2018ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಅಂದಿನ ಉಪ್ಪಿನಂಗಡಿ ಪೊಲೀಸ್ ವೃತ್ತ ನಿರೀಕ್ಷಕ ಡಿ. ಮಂಜುನಾಥ್ ಅವರು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸುಮಂಗಲ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದ್ದಾರೆ.
ಪೋಕ್ಸೊ ಕಾಯ್ದೆ-2012ರ ಸೆಕ್ಷನ್ 5(ಎಲ್) ಜೊತೆಗೆ ಸೆಕ್ಷನ್ 6ರ ಅಡಿಯಲ್ಲಿ ಅಪರಾಧಕ್ಕೆ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹25,000 ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಒಂದು ವರ್ಷ ಹೆಚ್ಚುವರಿ ಕಠಿಣ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶಿಸಲಾಗಿದೆ.
ಅದೇ ರೀತಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 506ರ ಅಡಿಯಲ್ಲಿ ಒಂದು ವರ್ಷದ ಕಠಿಣ ಜೈಲು ಶಿಕ್ಷೆ ಹಾಗೂ ₹25,000 ದಂಡ ವಿಧಿಸಲಾಗಿದೆ. ದಂಡ ಪಾವತಿಸದಿದ್ದಲ್ಲಿ ಮತ್ತೊಂದು ವರ್ಷ ಕಠಿಣ ಜೈಲು ಶಿಕ್ಷೆ ಅನುಭವಿಸ ಬೇಕಾಗುತ್ತದೆ. ಎರಡೂ ಶಿಕ್ಷೆಗಳನ್ನು ಏಕಕಾಲದಲ್ಲಿ ಜಾರಿಗೊಳಿಸುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಪುಷ್ಪರಾಜ್ ಅಡಂತ್ಯಾಯ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.

