ಮಂಗಳೂರು: ಹೊಸಬೆಟ್ಟು ನಿವಾಸಿ ಸೋಮನಾಥ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ನೊಂದ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆಗ್ರಹಿಸಿದ್ದಾರೆ.
ಸೋಮನಾಥ್ ಅವರ ಹೊಸಬೆಟ್ಟುವಿನ ನಿವಾಸಕ್ಕೆ ಭೇಟಿ ನೀಡಿದ ಕಿಶೋರ್ ಕುಮಾರ್ ಪುತ್ತೂರು ಅವರು, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಘಟನೆಯ ವಿವರಗಳನ್ನು ಪಡೆದುಕೊಂಡರು. ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಊರಿನ ಸುರಕ್ಷತೆ ಮತ್ತು ಸಾಮಾಜಿಕ ಕಾಳಜಿಯಿಂದ ತಡರಾತ್ರಿ ಬೀಚ್ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಜೋಡಿಯನ್ನು ಸ್ಥಳೀಯರು ವಿಚಾರಿಸಿದ್ದಾರೆ. ಆದರೆ, ಈ ವಿಚಾರವನ್ನು ಮುಂದಿಟ್ಟುಕೊಂಡು ಸೋಮನಾಥ್ ಅವರಿಗೆ ಪೊಲೀಸ್ ಠಾಣೆಯಲ್ಲಿ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆ ಅತ್ಯಂತ ಕಳವಳಕಾರಿಯಾಗಿದೆ ಎಂದು ಹೇಳಿದರು.
ಸ್ಥಳೀಯರು ಯಾವುದೇ ಜಾತಿ-ಧರ್ಮದ ಬಗ್ಗೆ ವಿಚಾರಿಸಿಲ್ಲ ಅಥವಾ ದೈಹಿಕ ಹಲ್ಲೆ ನಡೆಸಿಲ್ಲ ಎಂದು ಅವರು ತಿಳಿಸಿದರು. ದೂರು ನೀಡಿದ ಯುವತಿಯೇ ಹಲ್ಲೆ ನಡೆದಿಲ್ಲ ಎಂದು ಹೇಳಿದ್ದರೂ, ಸೋಮನಾಥ್ ಅವರನ್ನು ಠಾಣೆಗೆ ಕರೆಸಿ ಬೆಳಗ್ಗೆಯಿಂದ ರಾತ್ರಿಯವರೆಗೆ ಕೂರಿಸಿ, ಯುವತಿಯ ಕಾಲಿಗೆ ಬೀಳುವಂತೆ ಮಾಡಿ ವಿಡಿಯೋ ಚಿತ್ರೀಕರಿಸಿ ಮಾನಸಿಕವಾಗಿ ಹಿಂಸಿಸಲಾಗಿದೆ ಎಂಬ ಆರೋಪವನ್ನು ಅವರು ಮುಂದಿಟ್ಟರು.
“ಹತ್ತು ವರ್ಷ ಜೈಲಿನಲ್ಲಿ ಕೊಳೆಯುವಂತೆ ಮಾಡುತ್ತೇವೆ ಎಂದು ಬೆದರಿಕೆ ಹಾಕಲಾಗಿದೆ ಎಂಬ ಆರೋಪ ಗಂಭೀರವಾಗಿದೆ. ಊರಿನ ಸುರಕ್ಷತೆಯ ಕಾಳಜಿಯಿಂದ ವಿಚಾರಿಸಿದ ವ್ಯಕ್ತಿಯೊಬ್ಬರು ಇಂತಹ ಪರಿಸ್ಥಿತಿಯನ್ನು ಎದುರಿಸಿ ಪ್ರಾಣ ಕಳೆದುಕೊಳ್ಳುವಂತಾಗಿರುವುದು ದುಃಖಕರ ಸೋಮನಾಥ್ ಅವರ ಸಾವಿನಿಂದ ಕುಟುಂಬವು ತನ್ನ ಆಧಾರಸ್ತಂಭವನ್ನೇ ಕಳೆದುಕೊಂಡಿದೆ. ಈ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವುದು ಸರ್ಕಾರದ ಜವಾಬ್ದಾರಿ,” ಎಂದು ಕಿಶೋರ್ ಕುಮಾರ್ ಪುತ್ತೂರು ಹೇಳಿದರು.
ಪೊಲೀಸ್ ಅಧಿಕಾರ ದುರುಪಯೋಗದ ಆರೋಪದ ಕುರಿತು ಸಮಗ್ರ ತನಿಖೆ ನಡೆಸಬೇಕು. ಸೋಮನಾಥ್ ಅವರ ಸಾವಿಗೆ ಕಾರಣವಾದ ಪರಿಸ್ಥಿತಿಯನ್ನು ಪರಿಶೀಲಿಸಿ, ತಪ್ಪಿತಸ್ಥರೆಂದು ಕಂಡುಬರುವ ಪೊಲೀಸ್ ಸಿಬ್ಬಂದಿ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಇತರರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಪ್ರಕರಣವನ್ನು ಕೇವಲ ಕರ್ತವ್ಯಲೋಪಕ್ಕೆ ಸೀಮಿತಗೊಳಿಸದೆ, ಎಲ್ಲ ಆಯಾಮಗಳಿಂದ ತನಿಖೆ ನಡೆಸಬೇಕು ಎಂದು ಅವರು ಗೃಹ ಇಲಾಖೆ ಹಾಗೂ ಜಿಲ್ಲಾಡಳಿತವನ್ನು ಒತ್ತಾಯಿಸಿದರು.
ಇದಲ್ಲದೆ, ಮೃತರ ಕುಟುಂಬಕ್ಕೆ ಸರ್ಕಾರ ತಕ್ಷಣ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಕೂಡ ಘಟನೆಯನ್ನು ಖಂಡಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

