ಮಂಗಳೂರು: ಪ್ರೀತಿಯ ವಿಚಾರಕ್ಕೆ ಸಂಬಂಧಿಸಿದ ವೈಷಮ್ಯದಿಂದ ಯುವಕ ರಾಕೇಶ್ನನ್ನು ತಲವಾರಿನಿಂದ ಕೊಲೆಗೈದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ, ನಾಲ್ವರು ಆರೋಪಿಗಳಿಗೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಕಾರಾಗೃಹ ಶಿಕ್ಷೆ ಪ್ರಕಟಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
2019ರ ಜನವರಿ 3ರಂದು ಮಂಗಳೂರಿನ ಪಂಜಿಮೊಗರು–ಮಾಲಾಡಿ ರಸ್ತೆಯಲ್ಲಿರುವ ಎಂ.ವಿ. ಶೆಟ್ಟಿ ಕಾಲೇಜಿನ ಬಳಿ ಈ ಕೊಲೆ ನಡೆದಿತ್ತು. ಪ್ರಕರಣದ ಮೊದಲನೇ ಆರೋಪಿ ಸುನಿಲ್ ಕುಮಾರ್ ಅಲಿಯಾಸ್ ಕೌಟಿ ಎಂಬಾತನ ತಂಗಿಯನ್ನು ರಾಕೇಶ್ ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಸುನಿಲ್ ಕುಮಾರ್ ಸೇರಿದಂತೆ ನಾಲ್ವರು ಆರೋಪಿಗಳು ಸೇರಿ ರಾಕೇಶ್ನನ್ನು ತಲವಾರುಗಳಿಂದ ಕಡಿದು ಕೊಲೆ ಮಾಡಿದ್ದರು.

ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 02/2019ರ ಅಡಿಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 302 (ಕೊಲೆ), 120(ಬಿ) (ಅಪರಾಧ ಸಂಚು), 201 (ಸಾಕ್ಷ್ಯ ನಾಶ) ಮತ್ತು 212 (ಅಪರಾಧಿಗೆ ಆಶ್ರಯ ನೀಡುವುದು) ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪೊಲೀಸರು ತನಿಖೆ ನಡೆಸಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಸುದೀರ್ಘ ವಿಚಾರಣೆ ಬಳಿಕ ನಾಲ್ವರೂ ದೋಷಿಗಳು
ಎಸ್.ಸಿ. ಸಂಖ್ಯೆ 105/2019ರ ಪ್ರಕರಣದ ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಶ್ ಮಾರುತಿ ಕಮಟೆ ಅವರು, ಸುದೀರ್ಘ ವಿಚಾರಣೆಯ ಬಳಿಕ ನಾಲ್ವರು ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ ಶಿಕ್ಷೆ ವಿಧಿಸಿದ್ದಾರೆ.

ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಪ್ರಕರಣದ ಮೊದಲನೇ ಆರೋಪಿ ಸುನಿಲ್ ಕುಮಾರ್ ಅಲಿಯಾಸ್ ಕೌಟಿ, ಎರಡನೇ ಆರೋಪಿ ಪ್ರವೀಣ್ ಪೂಜಾರಿ ಅಲಿಯಾಸ್ ಚೋಟು ಹಾಗೂ ಮೂರನೇ ಆರೋಪಿ ಪ್ರೀತಮ್ ಅಲಿಯಾಸ್ ಅಭಿ ಅವರಿಗೆ ಕೊಲೆ ಮತ್ತು ಅಪರಾಧ ಸಂಚು ರೂಪಿಸಿದ ಅಪರಾಧಗಳಿಗಾಗಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ, ತಲಾ ₹15,000 ದಂಡ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ. ದಂಡ ಪಾವತಿಸಲು ವಿಫಲರಾದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗಿದೆ.
ನಾಲ್ವರು ಆರೋಪಿಗಳಿಗೆ ಮೂರು ವರ್ಷಗಳ ಶಿಕ್ಷೆ
ಕೊಲೆ ಪ್ರಕರಣದ ಸಾಕ್ಷ್ಯ ನಾಶಪಡಿಸಿದ ಅಪರಾಧಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೂ ತಲಾ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹5,000 ದಂಡ ವಿಧಿಸಲಾಗಿದೆ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗುತ್ತದೆ.
ನಾಲ್ಕನೇ ಆರೋಪಿ ರೋಹಿತ್ ಕುಮಾರ್ ಅಲಿಯಾಸ್ ಶೂಟರ್ಗೆ ಅಪರಾಧಿಗೆ ಆಶ್ರಯ ನೀಡಿದ ಅಪರಾಧಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹5,000 ದಂಡ ವಿಧಿಸಲಾಗಿದೆ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ ಅನುಭವಿಸಬೇಕಾಗಿದೆ.
ಮೃತನ ತಂದೆಗೆ ₹50,000 ನೀಡಲು ಆದೇಶ
ನ್ಯಾಯಾಲಯ ವಿಧಿಸಿರುವ ಒಟ್ಟು ₹70,000 ದಂಡದ ಮೊತ್ತದಲ್ಲಿ ₹20,000ವನ್ನು ಸರ್ಕಾರಕ್ಕೆ ಹಾಗೂ ₹50,000ವನ್ನು ಮೃತ ರಾಕೇಶ್ನ ತಂದೆಗೆ ನೀಡುವಂತೆ ಆದೇಶಿಸಲಾಗಿದೆ.
ಈ ಪ್ರಕರಣದ ತನಿಖೆಯನ್ನು ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಕೆ.ಆರ್ ನಾಯ್ಕ್ ಅವರು ನಡೆಸಿದ್ದರು. ಸರ್ಕಾರಿ ಅಭಿಯೋಜಕರಾದ ಮೋತೀಲಾಲ್ ಚೌದರಿ ಅವರು ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು

