ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರವಾಸಿ ವಾಹನಗಳ ಚಾಲಕರಿಗೆ ತಾರತಮ್ಯ ಮಾಡಲಾಗುತ್ತಿದೆ ಹಾಗೂ ಅವೈಜ್ಞಾನಿಕವಾಗಿ ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಟ್ಯಾಕ್ಸಿ ಚಾಲಕರು ನವೆಂಬರ್ 11ರಿಂದ ಕೆಂಜಾರಿನ ವಿಮಾನ ನಿಲ್ದಾಣದ ಮುಖ್ಯ ಪ್ರವೇಶ ದ್ವಾರದ ಬಳಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ.
ಈ ಹಿಂದೆ ಮಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ನಡೆದ ಉಭಯ ಜಿಲ್ಲೆಗಳ ಟ್ಯಾಕ್ಸಿ ಸಂಘಟನೆಗಳ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಟ್ಯಾಕ್ಸಿ ಸಂಘದ ಅಧ್ಯಕ್ಷ ರಘುಪತಿ ಭಟ್ ಅವರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಹಾಗೂ ಟ್ಯಾಕ್ಸಿ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ 10 ದಿನಗಳ ಗಡುವು ನೀಡಿದ್ದರು. ಬೇಡಿಕೆ ಈಡೇರದಿದ್ದರೆ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು.

ಈ ನಡುವೆ ವಿಮಾನ ನಿಲ್ದಾಣದ ಅಧಿಕಾರಿಗಳು ಟ್ಯಾಕ್ಸಿ ಸಂಘಟನೆಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರೂ, ಈ ಹಿಂದಿನ ನಾಲ್ಕು ಪ್ರಮುಖ ಬೇಡಿಕೆಗಳಿಗೆ ಯಾವುದೇ ಸಕಾರಾತ್ಮಕ ಸ್ಪಂದನೆ ದೊರೆತಿಲ್ಲ. ಹೊಸದಾಗಿ ಜಾರಿಗೆ ತಂದಿರುವ 50 ರೂ. ಪ್ರವೇಶ ಶುಲ್ಕವನ್ನು ಕೈಬಿಡುವ ಕುರಿತು ನಾಲ್ಕು ದಿನಗಳಲ್ಲಿ ಪರಿಶೀಲಿಸುವುದಾಗಿ ಮಾತ್ರ ಭರವಸೆ ನೀಡಿದ್ದು, ಇದು ಚಾಲಕರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಸಂಘಟನೆಗಳು ತಿಳಿಸಿವೆ.
ಈ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳ ಟ್ಯಾಕ್ಸಿ ಸಂಘಟನೆಗಳ ನಿಯೋಗವು ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ, ಬೇಡಿಕೆಗಳು ಈಡೇರುವವರೆಗೆ ಹೋರಾಟ ಮುಂದುವರಿಸುವುದಾಗಿ ಸ್ಪಷ್ಟಪಡಿಸಿದೆ. ನವೆಂಬರ್ 11ರಿಂದ ಸಮಾನ ಮನಸ್ಕ ಚಾಲಕ ಸಂಘಟನೆಗಳು ಹಾಗೂ ಸಾರ್ವಜನಿಕ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕಾನೂನುಬದ್ಧ ಅನುಮತಿ ಪಡೆದು ಅನಿರ್ದಿಷ್ಟಾವಧಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ ಸಂಘದ ಅಧ್ಯಕ್ಷ ರಘುಪತಿ ಭಟ್, ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ ಸಂಘದ ಅಧ್ಯಕ್ಷ ಆನಂದ್ ಕೆ., ಪ್ರಧಾನ ಕಾರ್ಯದರ್ಶಿ ಜಯಂತ್ ಕೋಟ್ಯಾನ್, ಉಪಾಧ್ಯಕ್ಷರಾದ ಹರೀಶ್ ಶೆಟ್ಟಿ, ರೋಶನ್ ಕಿನ್ನಿಗೋಳಿ, ಸಮಿತಿ ಸದಸ್ಯರಾದ ಸಂತೋಷ್ ಕೊಲ್ಯ, ಪ್ರಕಾಶ್ ಸರಳಾಯ ಮತ್ತಿತರರು ಉಪಸ್ಥಿತರಿದ್ದರು. ಧರಣಿ ಹೋರಾಟಕ್ಕೆ ಮಾಧ್ಯಮಗಳು ಹಾಗೂ ಸಾರ್ವಜನಿಕರು ಸಹಕಾರ ನೀಡುವಂತೆ ಸಂಘಟಕರು ಮನವಿ ಮಾಡಿದ್ದಾರೆ.

