ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ವಿವಾದಾತ್ಮಕ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಹಾಗೂ ಕೆಪಿಸಿಸಿ ವಕ್ತಾರೆ ಕೃಪಾ ಆಳ್ವ ಅವರನ್ನು ಪಕ್ಷದಿಂದ ಅಧಿಕೃತವಾಗಿ ಉಚ್ಚಾಟಿಸಲಾಗಿದೆ.
2023ರಲ್ಲಿ ಚಿತ್ರೀಕರಿಸಲಾಗಿದೆ ಎನ್ನಲಾದ ವಿಡಿಯೋವೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಅದರಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಲಾಗಿತ್ತು. ಈ ವಿಡಿಯೋ ನಕಲಿಯಾಗಿದ್ದು, ತಮ್ಮ ವಿರುದ್ಧ ಬ್ಲ್ಯಾಕ್ಮೇಲ್ ಹಾಗೂ ಮಾನಹಾನಿ ಮಾಡುವ ಉದ್ದೇಶದಿಂದ ಸೃಷ್ಟಿಸಲಾಗಿದೆ ಎಂದು ಸಿದ್ದರಾಮಯ್ಯ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು.
ಈ ಸ್ಟಿಂಗ್ ಆಪರೇಷನ್ ಹಿಂದೆ ಕೃಪಾ ಆಳ್ವ ಹಾಗೂ ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಅವರ ಕೈವಾಡವಿದೆ ಎಂದು ಸಿದ್ದರಾಮಯ್ಯ ಮತ್ತು ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಬಹಿರಂಗವಾಗಿ ಆರೋಪಿಸಿದ್ದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಕೃಪಾ ಆಳ್ವ ಅವರು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪವೂ ಕೇಳಿಬಂದಿತ್ತು.
ಪ್ರಕರಣದ ತನಿಖೆ ನಡೆಸುತ್ತಿರುವ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಕೃಪಾ ಆಳ್ವ ಅವರನ್ನು ವಿಚಾರಣೆಗೊಳಪಡಿಸಿ ಹೇಳಿಕೆ ದಾಖಲಿಸಿಕೊಂಡಿದ್ದರು. ಇದೀಗ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿರುವ ಬೆನ್ನಲ್ಲೇ, ಅವರು ಜಪಾನ್ ಮೂಲಕ ಅಮೆರಿಕಕ್ಕೆ ತೆರಳಿದ್ದಾರೆ ಎನ್ನಲಾಗಿದೆ.
ಈ ವಿವಾದದಿಂದ ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರ ಉಂಟಾದ ಹಿನ್ನೆಲೆಯಲ್ಲಿ ಕೆಪಿಸಿಸಿ ಕೃಪಾ ಆಳ್ವ ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿತ್ತು. ಇದೀಗ ಪಕ್ಷದ ಶಿಸ್ತುಕ್ರಮದ ಭಾಗವಾಗಿ ಅವರನ್ನು ಕಾಂಗ್ರೆಸ್ನಿಂದ ಉಚ್ಚಾಟಿಸಲಾಗಿದೆ.

