ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿರುವ ಸಾಹಸಸಿಂಹ ಡಾ.ವಿಷ್ಣುವರ್ಧನ್ ಹಾಗೂ ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿರುವ ಹಿರಿಯ ನಟಿ ಬಿ.ಸರೋಜಾದೇವಿ ಅವರಿಗೆ ರಾಜ್ಯ ಸರ್ಕಾರದ ಅತ್ಯುನ್ನತ ನಾಗರಿಕ ಗೌರವವಾದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮರಣೋತ್ತರವಾಗಿ ಪ್ರದಾನ ಮಾಡಲು ನಿರ್ಧರಿಸಲಾಗಿದೆ. ನವೆಂಬರ್ 19ರಂದು ಬೆಂಗಳೂರಿನ ವಿಧಾನಸೌಧದ ಗ್ರಾಂಡ್ ಸ್ಟೆಪ್ ಮುಂಭಾಗದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಸರ್ಕಾರ ತೀರ್ಮಾನಿಸಿದೆ.
ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಇಬ್ಬರು ದಿಗ್ಗಜ ಕಲಾವಿದರಿಗೂ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡುವ ಕಾರ್ಯಕ್ರಮದ ಸಿದ್ಧತೆಗಳು ನಡೆಯುತ್ತಿವೆ ಎಂದು ತಿಳಿಸಿದರು.
ಈ ಹಿಂದೆ 2025ರ ಸೆಪ್ಟೆಂಬರ್ 11ರಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಡಾ. ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿತ್ತು. ಇದೀಗ ಆ ನಿರ್ಧಾರವನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ನವೆಂಬರ್ 19ರಂದು ಅಧಿಕೃತವಾಗಿ ಪ್ರಶಸ್ತಿ ಪ್ರದಾನ ಮಾಡಲು ದಿನಾಂಕ ನಿಗದಿಪಡಿಸಲಾಗಿದೆ.
ರಜನಿಕಾಂತ್ಗೆ ಆಹ್ವಾನ ನೀಡಲು ಚಿಂತನೆ
ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ವಿಶೇಷ ಮೆರುಗು ನೀಡುವ ಉದ್ದೇಶದಿಂದ ದಕ್ಷಿಣ ಭಾರತದ ಖ್ಯಾತ ನಟ ರಜನಿಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.
ರಜನಿಕಾಂತ್ ಅವರು ಕನ್ನಡಿಗರಾಗಿದ್ದು, ತಮಿಳು ಚಿತ್ರರಂಗದಲ್ಲಿ ಪ್ರಮುಖ ನಟರಾಗಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ ಅವರನ್ನು ಸಮಾರಂಭಕ್ಕೆ ಆಹ್ವಾನಿಸುವ ಆಲೋಚನೆ ಇದೆ ಎಂದು ಸಚಿವರು ಹೇಳಿದರು.
ಅಲ್ಲದೆ, ವಿಷ್ಣುವರ್ಧನ್ ಅವರೊಂದಿಗೆ ವಿವಿಧ ಚಿತ್ರಗಳಲ್ಲಿ ಅಭಿನಯಿಸಿರುವ ಹಿರಿಯ ನಟಿ ಲಕ್ಷ್ಮೀ ಹಾಗೂ ನಟಿ ಸುಹಾಸಿನಿ ಅವರಲ್ಲೊಬ್ಬರನ್ನು ಸಮಾರಂಭಕ್ಕೆ ಆಹ್ವಾನಿಸುವ ಉದ್ದೇಶವಿದೆ. ಈ ಕುರಿತು ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಮಾಹಿತಿ ನೀಡಿದರು.
ಕನ್ನಡ ಚಿತ್ರರಂಗದ ಎರಡು ಮಹಾನ್ ಕಲಾವಿದರ ಕಲಾಸೇವೆಯನ್ನು ಸ್ಮರಿಸಿ ಗೌರವಿಸುವ ಈ ಸಮಾರಂಭದಲ್ಲಿ ಚಿತ್ರರಂಗದ ಗಣ್ಯರು ಹಾಗೂ ಪ್ರಮುಖರು ಭಾಗವಹಿಸುವ ನಿರೀಕ್ಷೆಯಿದೆ. ಕರ್ನಾಟಕದ ಸಾಂಸ್ಕೃತಿಕ ಇತಿಹಾಸದಲ್ಲಿ ವಿಶೇಷ ಸ್ಥಾನ ಪಡೆದಿರುವ ವಿಷ್ಣುವರ್ಧನ್ ಮತ್ತು ಸರೋಜಾದೇವಿ ಅವರಿಗೆ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನವಾಗುತ್ತಿರುವುದು ಅವರ ಕಲಾ ಕೊಡುಗೆಗೆ ಸಲ್ಲಿಸುವ ಗೌರವವಾಗಿದೆ.

