ಮಂಗಳೂರು: ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್ಮೆಂಟ್ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಸಿಂಚನ 2026 ಅಂತರ ವಿಭಾಗೀಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕಾಲೇಜಿನ ಸೃಷ್ಟಿ ಸಭಾಂಗಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಹಾಸ್ಯ ಲೇಖಕಿ ಭುವನೇಶ್ವರಿ ಹೆಗಡೆ ಅವರು ಚೆಂಡೆ ಬಾರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

ನಂತರ ಮಾತನಾಡಿದ ಅವರು, ಕರಾವಳಿಯ ಕನ್ನಡ ಭಾಷೆಯ ಸೊಗಸು ಮತ್ತು ವೈಶಿಷ್ಟ್ಯವನ್ನು ವಿವಿಧ ಉದಾಹರಣೆಗಳ ಮೂಲಕ ವಿವರಿಸಿದರು. ಕನ್ನಡ ಭಾಷೆಯ ಘನತೆ ಹಾಗೂ ಕನ್ನಡಿಗರ ಆತ್ಮಗೌರವವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಕನ್ನಡದ ಶ್ರೀಮಂತಿಕೆ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೂ ಉಳಿಸಿಕೊಂಡು ಹೋಗಬೇಕು ಎಂದು ಕರೆ ನೀಡಿದರು.

ಭಂಡಾರಿ ಫೌಂಡೇಶನ್ ಟ್ರಸ್ಟಿ ದೇವದಾಸ್ ಹೆಗಡೆ ಅವರು ಕನ್ನಡ ರಾಜ್ಯೋತ್ಸವದ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ಎಸ್.ಇಂಜಗನೇರಿ ಮಾತನಾಡಿ, ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಪ್ರಾಥಮಿಕ ಹಂತದಲ್ಲಿ, ವಿಶೇಷವಾಗಿ ನಾಲ್ಕನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

