ಮಂಗಳೂರು: ನಗರದ ನೆಹರು ಮೈದಾನದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಮಾರಂಭವು ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಚಿವ ಯು.ಟಿ. ಖಾದರ್ ಅವರು ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಮಹತ್ವವನ್ನು ಸಾರಿದರು.

ಸಮಾರಂಭದ ಪ್ರಮುಖ ಆಕರ್ಷಣೆಯಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 120 ಸಾಧಕರಿಗೆ ಹಾಗೂ 53 ಸಂಘ-ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಪೊಲೀಸ್ ಪಡೆ, ಎನ್ಸಿಸಿ ತಂಡ ಹಾಗೂ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ನಡೆದ ಆಕರ್ಷಕ ಪಥಸಂಚಲನವು ನೆರೆದಿದ್ದವರ ಗಮನ ಸೆಳೆಯಿತು.



ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಾಹಿದ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ರಾಜ್ಯ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನ್ಲಿ ಅಲ್ವಾರಿಸ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

