ಮಂಗಳೂರು: ಚಿತ್ರಕಲೆ ಕ್ಷೇತ್ರದಲ್ಲಿ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು, ಕಲಾ ಸೇವೆ ಹಾಗೂ ಸಾಂಸ್ಕೃತಿಕ ಕೊಡುಗೆಗಳ ಮೂಲಕ ಗಮನ ಸೆಳೆದಿರುವ ಕಲಾವಿದ ಝುಬೇರ್ ಖಾನ್ ಕುಡ್ಲ ಅವರು 2026ನೇ ಸಾಲಿನ ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಲಲಿತಕಲೆ ವಿಭಾಗದಲ್ಲಿ ಅವರಿಗೆ ಈ ಗೌರವ ಲಭಿಸಿದೆ.
ಚಿತ್ರಕಲಾ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಝುಬೇರ್ ಖಾನ್ ಕುಡ್ಲ ಅವರು ದೇಶ-ವಿದೇಶಗಳ ವಿವಿಧ ಕಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದ್ದಾರೆ. ಅವರ ಕಲಾ ಸಾಧನೆಗೆ ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರಿಂದ ಮೆಚ್ಚುಗೆ ಪತ್ರ ದೊರೆತಿರುವುದು ವಿಶೇಷ ಹೆಗ್ಗಳಿಕೆಯಾಗಿದೆ.

ಇದಲ್ಲದೆ, ರಾಜಾ ರವಿವರ್ಮ ಅಂತರಾಷ್ಟ್ರೀಯ ಗೋಲ್ಡ್ ಮೆಡಲ್, ಎಂ.ಎಫ್.ಹುಸೈನ್ ಅಂತರಾಷ್ಟ್ರೀಯ ಪ್ರಶಸ್ತಿ ಹಾಗೂ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿ ಮತ್ತು ಪುರಸ್ಕಾರಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಕಲೆಯ ಮೂಲಕ ನಾಡಿನ ಸಂಸ್ಕೃತಿ ಹಾಗೂ ಪರಂಪರೆಯನ್ನು ಪರಿಚಯಿಸುವ ಕಾರ್ಯದಲ್ಲಿಯೂ ಅವರು ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ.
ದುಬೈನಲ್ಲಿ ನಡೆದ ವಿಶ್ವ ತುಳು ಸಮ್ಮೇಳನದಲ್ಲಿ ತುಳುನಾಡಿನ ಸಮಗ್ರ ತುಳು ಕಲಾ ಸಂಸ್ಕೃತಿಯನ್ನು ಚಿತ್ರಕಲೆಯ ಮೂಲಕ ಪ್ರದರ್ಶಿಸಿ ತುಳು ಭಾಷೆ ಮತ್ತು ಸಂಸ್ಕೃತಿಯ ಮೇಲಿನ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ವಿಶ್ವ ಬ್ಯಾರಿ ಸಮ್ಮೇಳನದಲ್ಲಿಯೂ ದುಬೈನಲ್ಲಿ ಅವರ ಕಲಾಕೃತಿಗಳು ಪ್ರದರ್ಶನಗೊಂಡಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಕರಾವಳಿಯ ಕಲಾ ವೈಭವವನ್ನು ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.
ಕಲಾ ಕ್ಷೇತ್ರದ ಸಾಧನೆಯ ಜೊತೆಗೆ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶೈಕ್ಷಣಿಕ ಕಾರ್ಯಾಗಾರಗಳನ್ನೂ ನಡೆಸುತ್ತಿದ್ದಾರೆ. ಇದುವರೆಗೆ 300ಕ್ಕೂ ಹೆಚ್ಚು ಮಕ್ಕಳಿಗೆ ಚಿತ್ರಕಲಾ ಶೈಕ್ಷಣಿಕ ಕಾರ್ಯಾಗಾರಗಳನ್ನು ಆಯೋಜಿಸಿ, ಅವರಲ್ಲಿರುವ ಸೃಜನಶೀಲ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ‘ರಂಗ ಸ್ವರೂಪ’ ತಂಡದ ಪ್ರಮುಖರಾಗಿರುವ ಝುಬೇರ್ ಖಾನ್ ಕುಡ್ಲ ಅವರು ಪ್ರಸ್ತುತ ಪ್ರೆಸಿಡೆನ್ಸಿ ಶಾಲೆಯಲ್ಲಿ ಕಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಚಿತ್ರಕಲೆ, ಸಾಂಸ್ಕೃತಿಕ ಚಟುವಟಿಕೆ ಹಾಗೂ ಕಲಾ ಶಿಕ್ಷಣದ ಮೂಲಕ ಸಮಾಜಕ್ಕೆ ನೀಡುತ್ತಿರುವ ಅವರ ಕೊಡುಗೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಂದಿರುವುದು ಕಲಾ ವಲಯದಲ್ಲಿ ಸಂತಸ ತಂದಿದೆ.


