ಮಂಗಳೂರು: ನಗರದಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಬಂಧಿಸಿದ್ದು, ಆಕೆಯಿಂದ ಸುಮಾರು 15.30 ಲಕ್ಷ ರೂ. ಮೌಲ್ಯದ 153 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಮಹಿಳೆಯನ್ನು ಮೂಲತಃ ಬೆಳ್ತಂಗಡಿ ತಾಲೂಕಿನ ಗುರಿಂಗಾನ ನಿವಾಸಿ, ಪ್ರಸ್ತುತ ಮಂಗಳೂರಿನ ಪಂಪ್ವೆಲ್ ಸಮೀಪದ ಉಜ್ಜೋಡಿಯಲ್ಲಿ ವಾಸವಾಗಿರುವ ನಸೀಮಾ (42) ಎಂದು ಗುರುತಿಸಲಾಗಿದೆ.
ಮಂಗಳೂರು ನಗರದಲ್ಲಿ ದಾಖಲಾಗಿದ್ದ ಮಾದಕ ವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣವೊಂದರ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ನಸೀಮಾ ಮಾದಕ ವಸ್ತುಗಳ ಪೂರೈಕೆಯಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಆಕೆಯ ಚಟುವಟಿಕೆಗಳ ಮೇಲೆ ನಿಗಾ ಇರಿಸಿ ಕಾರ್ಯಾಚರಣೆ ನಡೆಸಲಾಯಿತು.
ಪೊಲೀಸರ ತಂಡವು ಪಂಪ್ವೆಲ್ನ ಉಜ್ಜೋಡಿ ಸಮೀಪದ ರಾಧಾ ರೆಸಿಡೆನ್ಸಿ ಅಪಾರ್ಟ್ಮೆಂಟ್ಗೆ ದಾಳಿ ನಡೆಸಿದಾಗ, ಅಲ್ಲಿ ಸುಮಾರು 153 ಗ್ರಾಂ ಎಂಡಿಎಂಎ ಮಾದಕ ವಸ್ತು ಪತ್ತೆಯಾಗಿದೆ. ಇದರ ಮೌಲ್ಯ ಸುಮಾರು 15,30,000 ರೂ. ಎಂದು ಅಂದಾಜಿಸಲಾಗಿದೆ. ಮಾದಕ ವಸ್ತುವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಲಾಗಿದೆ.
ವಿಚಾರಣೆ ವೇಳೆ ನಸೀಮಾ ಮಂಗಳೂರು ನಗರದ ವಿವಿಧ ಪ್ರದೇಶಗಳಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಎಂಡಿಎಂಎ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಮಾದಕ ವಸ್ತು ಪೂರೈಕೆ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಅವರ ಪತ್ತೆ ಹಾಗೂ ಬಂಧನಕ್ಕಾಗಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಮಂಗಳೂರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮಾದಕ ವಸ್ತು ಪೂರೈಕೆ ಜಾಲವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

