ಮಸ್ಕತ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ನಡುವೆಯೇ ಒಮನ್ ಕರಾವಳಿಯಲ್ಲಿ ಭಾರತದ ಧ್ವಜ ಹೊಂದಿದ್ದ ಸರಕು ಸಾಗಣೆ ಹಡಗಿನ ಮೇಲೆ ವೈಮಾನಿಕ ದಾಳಿ ನಡೆದಿದೆ. ದಾಳಿಯಲ್ಲಿ ಗುಜರಾತ್ ಮೂಲದ ಭಾರತೀಯ ನಾವಿಕ ಮೃತಪಟ್ಟಿದ್ದು, ಹಡಗಿನಲ್ಲಿದ್ದ ಇತರ 13 ಮಂದಿ ನಾವಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.
‘ಅಲ್ ಜುಸುಫಿ’ (Al Jusufi) ಹೆಸರಿನ ಸರಕು ಸಾಗಣೆ ಹಡಗಿನ ಮೇಲೆ ನವೆಂಬರ್ 2ರಂದು ದಾಳಿ ನಡೆದಿರುವುದಾಗಿ ತಿಳಿದುಬಂದಿದೆ. ಹಡಗಿನ ಮೇಲೆ ವೈಮಾನಿಕ ವಸ್ತುವೊಂದು ಅಪ್ಪಳಿಸಿದ ಪರಿಣಾಮ ಓರ್ವ ನಾವಿಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಒಮನ್ ಕರಾವಳಿ ರಕ್ಷಣಾ ಪಡೆ ತಕ್ಷಣ ಕಾರ್ಯಾಚರಣೆ ನಡೆಸಿ ಉಳಿದ 13 ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದೆ.
ಈ ಕುರಿತು ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗ ಸಚಿವ ಸರ್ಬಾನಂದ ಸೋನೋವಾಲ್ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಹಡಗಿನಲ್ಲಿ ಒಟ್ಟು 14 ಭಾರತೀಯ ನಾವಿಕರಿದ್ದರು. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ಗುಜರಾತ್ ಮೂಲದ ಗಂಧರ್ ನಹೀಮ್ ಅಜೀಜ್ ಮೃತಪಟ್ಟಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ನಾವಿಕನ ಸಾವಿಗೆ ಸಚಿವರ ಸಂತಾಪ
ಭಾರತೀಯ ನಾವಿಕನ ಸಾವಿಗೆ ಸಚಿವ ಸರ್ಬಾನಂದ ಸೋನೋವಾಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತ ನಾವಿಕನ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿರುವ ಅವರು, ಸಂಕಷ್ಟದಲ್ಲಿರುವ ಇತರ ಸಿಬ್ಬಂದಿಗೆ ಅಗತ್ಯ ನೆರವು ಒದಗಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.
ದಾಳಿಯ ಮಾಹಿತಿ ಲಭ್ಯವಾದ ಕೂಡಲೇ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ರಕ್ಷಿಸಲ್ಪಟ್ಟ 13 ನಾವಿಕರ ಸುರಕ್ಷತೆ, ವಸತಿ ಹಾಗೂ ಇತರ ಅಗತ್ಯ ಸೌಲಭ್ಯಗಳಿಗೆ ಆದ್ಯತೆ ನೀಡಲಾಗಿದ್ದು, ಅವರನ್ನು ಶೀಘ್ರದಲ್ಲೇ ಭಾರತಕ್ಕೆ ಕರೆತರಲು ವ್ಯವಸ್ಥೆ ಮಾಡಲಾಗುತ್ತಿದೆ.
ಭಾರತೀಯ ರಾಯಭಾರ ಕಚೇರಿಯಿಂದ ನಿರಂತರ ಸಂಪರ್ಕ
ಘಟನೆಯ ಹಿನ್ನೆಲೆಯಲ್ಲಿ ಕೇಂದ್ರ ಹಡಗು ಸಚಿವಾಲಯ ಹಾಗೂ ಒಮನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸ್ಥಳೀಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿವೆ. ರಕ್ಷಿಸಲ್ಪಟ್ಟ ನಾವಿಕರಿಗೆ ಅಗತ್ಯ ನೆರವು ಒದಗಿಸುವುದರ ಜೊತೆಗೆ, ಅವರ ಸುರಕ್ಷಿತ ವಾಪಸಾತಿಗೆ ಬೇಕಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮೃತ ನಾವಿಕನ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಅಗತ್ಯ ಪ್ರಕ್ರಿಯೆಗಳನ್ನು ಆರಂಭಿಸಲಾಗಿದೆ. ಮೃತರ ಕುಟುಂಬಕ್ಕೆ ನೆರವು ನೀಡುವ ನಿಟ್ಟಿನಲ್ಲಿಯೂ ಸಂಬಂಧಪಟ್ಟ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ.
ದಾಳಿಯ ಹಿಂದಿನ ಶಕ್ತಿ ಯಾವುದು?
ಭಾರತದ ಧ್ವಜ ಹೊಂದಿದ್ದ ಸರಕು ಸಾಗಣೆ ಹಡಗಿನ ಮೇಲೆ ನಡೆದ ದಾಳಿಯ ಹಿಂದೆ ಯಾರಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ದಾಳಿಗೆ ಬಳಸಲಾದ ವೈಮಾನಿಕ ವಸ್ತು ಡ್ರೋನ್ ಅಥವಾ ಕ್ಷಿಪಣಿಯೇ? ಹಡಗನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆಯೇ? ಎಂಬ ಹಲವು ಪ್ರಶ್ನೆಗಳು ಉದ್ಭವಿಸಿವೆ.

