ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕವಸ್ತು ಎಲ್ಎಸ್ಡಿ (LSD) ಮಾರಾಟ ಜಾಲದ ವಿರುದ್ಧ ಕಾರ್ಯಾಚರಣೆ ನಡೆಸಿದ ಮಂಗಳೂರು ನಗರ ಅಪರಾಧ ವಿಭಾಗದ (CCB) ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಸುಮಾರು ₹3.35 ಲಕ್ಷ ಮೌಲ್ಯದ ಮಾದಕವಸ್ತು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು ನಗರದಿಂದ ಎಲ್ಎಸ್ಡಿ ಡ್ರಗ್ಸ್ ಖರೀದಿಸಿ ಮಂಗಳೂರಿನಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ನವೆಂಬರ್ 3ರಂದು ಮಧ್ಯಾಹ್ನ ನಗರದ ಪಡೀಲ್ ರೈಲ್ವೆ ಸೇತುವೆ ಬಳಿ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ನಿಹಾಲ್ ಸ್ಯಾಂಪ್ರೆಸ್ ರೋಡ್ರಿಗಸ್ (30), ತುಂಬೆ ಪ್ಲಾಜಾ, ಅಳಪೆ, ಪಡೀಲ್, ಮಂಗಳೂರು.ಹಾಗೂ ಸಿದ್ದಾರ್ಥ ಶೆಟ್ಟಿ (35), ಎಮಿಲೇ ಮ್ಯಾನ್ಷನ್ ಅಪಾರ್ಟ್ಮೆಂಟ್, ದಡ್ಡಲ್ಕಾಡ್, ಉರ್ವ ಸ್ಟೋರ್, ಮಂಗಳೂರು.ಬಂಧಿತ ಆರೋಪಿಗಳು.
ಆರೋಪಿಗಳಿಂದ ಸುಮಾರು ₹3 ಲಕ್ಷ ಮೌಲ್ಯದ 100 ಎಲ್ಎಸ್ಡಿ ಡ್ರಗ್ಸ್ ಸ್ಟ್ರಿಪ್ಗಳು ಹಾಗೂ ಮೂರು ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹3,35,000 ಎಂದು ಅಂದಾಜಿಸಲಾಗಿದೆ.
ಬಂಧಿತ ನಿಹಾಲ್ ಸ್ಯಾಂಪ್ರೆಸ್ ರೋಡ್ರಿಗಸ್ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಮಾದಕವಸ್ತು ಮಾರಾಟಕ್ಕೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು.
ಇನ್ನು ಸಿದ್ದಾರ್ಥ ಶೆಟ್ಟಿ ವಿರುದ್ಧ ಮಂಗಳೂರು ನಗರದ ಬರ್ಕೆ ಹಾಗೂ ಉರ್ವ ಪೊಲೀಸ್ ಠಾಣೆಗಳಲ್ಲಿ ಗಲಾಟೆ, ಕೊಲೆಯತ್ನ, ಗಾಂಜಾ ಮಾರಾಟ ಸೇರಿದಂತೆ ಒಟ್ಟು ಒಂಬತ್ತು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.
ಮಾದಕವಸ್ತು ಮಾರಾಟ ಮತ್ತು ಸಾಗಾಟದ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಿದ್ದು, ಅವರ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

