ಮಂಗಳೂರು: ನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 23 ವರ್ಷದ ಯುವಕನನ್ನು ಪಣಂಬೂರು ಪೊಲೀಸರು ಬಂಧಿಸಿದ್ದು, ಆತನಿಂದ ಸುಮಾರು 3 ಕೆ.ಜಿ. 800 ಗ್ರಾಂ ಗಾಂಜಾ ಸೇರಿದಂತೆ ಒಟ್ಟು ₹3.94 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ನ. 5ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಕ್ರಾಸ್ ರೈಲ್ವೆ ಸೇತುವೆ ಸಮೀಪ ಗಾಂಜಾ ಮಾರಾಟಕ್ಕೆ ಸಿದ್ಧತೆ ನಡೆಸುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಉತ್ತರ ಉಪವಿಭಾಗದ ಎಸಿಪಿ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಪಣಂಬೂರು ಪೊಲೀಸ್ ಠಾಣೆಯ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದರು.

ಈ ಸಂದರ್ಭದಲ್ಲಿ ಗಾಂಜಾ ಮಾರಾಟಕ್ಕೆ ಬಂದಿದ್ದ ಪುತ್ತೂರು ತಾಲೂಕಿನ ಪಡ್ನೂರು ನಿವಾಸಿ ಮೊಹಮ್ಮದ್ ನಿಸಾರ್ (23) ಎಂಬಾತನನ್ನು ಬಂಧಿಸಲಾಯಿತು. ಆರೋಪಿಯಿಂದ ಅಂದಾಜು ₹1.90 ಲಕ್ಷ ಮೌಲ್ಯದ 3.8 ಕೆ.ಜಿ. ಗಾಂಜಾ, ₹4 ಸಾವಿರ ಮೌಲ್ಯದ ಮೊಬೈಲ್ ಫೋನ್ ಹಾಗೂ ಗಾಂಜಾ ಸಾಗಾಟಕ್ಕೆ ಬಳಸಿದ್ದ ಕೆಎಲ್ 14 1662 ನೋಂದಣಿ ಸಂಖ್ಯೆಯ ಸುಮಾರು ₹2 ಲಕ್ಷ ಮೌಲ್ಯದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿ ಸುರತ್ಕಲ್, ಪಣಂಬೂರು, ಕಾವೂರು ಸೇರಿದಂತೆ ಮಂಗಳೂರು ನಗರದ ವಿವಿಧ ಪ್ರಮುಖ ಪ್ರದೇಶಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಅಲ್ಲದೆ, ಈ ಹಿಂದೆಯೂ ಹಲವು ಬಾರಿ ಮಂಗಳೂರು ನಗರದಲ್ಲಿ ಗಾಂಜಾ ಮಾರಾಟ ಮಾಡಿರುವುದಾಗಿ ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ವಶಪಡಿಸಿಕೊಂಡ ಗಾಂಜಾ, ಮೊಬೈಲ್ ಫೋನ್ ಮತ್ತು ಕಾರಿನ ಒಟ್ಟು ಅಂದಾಜು ಮೌಲ್ಯ ₹3,94,000 ಆಗಿದೆ. ಈ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 137/2026ರಂತೆ ಎನ್ಡಿಪಿಎಸ್ ಕಾಯ್ದೆಯ ಕಲಂ 8(C), 20(b)(ii)(A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

