ದುಬೈ: ವಿದೇಶದಲ್ಲಿ ನೆಲೆಸಿದ್ದರೂ ತಾಯ್ನಾಡಿನ ಭಾಷೆ, ಸಂಸ್ಕೃತಿ ಮತ್ತು ಸಮಾಜದೊಂದಿಗೆ ನಿರಂತರ ನಂಟು ಹೊಂದಿ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಯುಎಇಯ ಖ್ಯಾತ ಸಮಾಜಸೇವಕ ಹಾಗೂ ಕಲಾಪೋಷಕ ಸತೀಶ್ ಪೂಜಾರಿ ಬೆಳಪು ಅವರು 2026ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕಳೆದ 25 ವರ್ಷಗಳಿಂದ ಯುಎಇಯಲ್ಲಿ ಸಮಾಜಸೇವೆ, ಕನ್ನಡ ಮತ್ತು ತುಳು ಭಾಷೆಯ ಬೆಳವಣಿಗೆ, ಕಲೆ, ಸಾಹಿತ್ಯ, ಸಂಸ್ಕೃತಿಯ ಉಳಿವು ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಸಲ್ಲಿಸುತ್ತಿರುವ ನಿರಂತರ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆ ಯುಎಇ ಸೇರಿದಂತೆ ಕರಾವಳಿಯ ಕನ್ನಡಿಗರು, ಅಭಿಮಾನಿಗಳು ಮತ್ತು ವಿವಿಧ ಸಂಘ-ಸಂಸ್ಥೆಗಳ ವಲಯದಿಂದ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.
ಪಯೋನೀರ್ ಇನ್ಶೂರೆನ್ಸ್ ಸಂಸ್ಥೆಯಲ್ಲಿ ಜನರಲ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿರುವ ಸತೀಶ್ ಪೂಜಾರಿ ಅವರು ಉದ್ಯೋಗದ ಜವಾಬ್ದಾರಿಯ ನಡುವೆಯೂ ಸಮಾಜಮುಖಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದ್ದಾರೆ. ಆರ್ಯಭಟ ಅಂತರರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾಗಿರುವ ಇವರು ‘ನಮ್ಮ ತುಳುವೆರ್’ ಸಂಘಟನೆಯ ಸ್ಥಾಪಕ ಸದಸ್ಯರಾಗಿದ್ದಾರೆ. ಅಲ್ಲದೆ, ಕರ್ನಾಟಕ ಸಂಘ ಶಾರ್ಜಾ ಹಾಗೂ ಬಿಲ್ಲವಾಸ್ ದುಬೈ ಮತ್ತು ನಾರ್ದರ್ನ್ ಎಮಿರೇಟ್ಸ್ ಸಂಸ್ಥೆಗಳ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.
ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಿನ ಹಸ್ತ
ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಆಶಯದೊಂದಿಗೆ ಶ್ರೀ ಗುರು ಚಾರಿಟೇಬಲ್ ಟ್ರಸ್ಟ್ ಮೂಲಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುತ್ತಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳನ್ನು ಪಾಲಿಸುತ್ತಿರುವ ಅವರು, ಕಳೆದ ಹತ್ತು ವರ್ಷಗಳಿಂದ ಸರ್ಕಾರಿ ಮೀನುಗಾರಿಕಾ ಕಾಲೇಜು, ಪೊಲಿಪು ಇಲ್ಲಿನ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ವಿದ್ಯಾರ್ಥಿವೇತನ ಒದಗಿಸುತ್ತಿದ್ದಾರೆ. ಮುಲ್ಕಿಯ ವಿಜಯ ಕಾಲೇಜಿನ ವಿದ್ಯಾರ್ಥಿಗಳಿಗೂ ಹಲವು ವರ್ಷಗಳಿಂದ ವಿದ್ಯಾರ್ಥಿವೇತನ ಮತ್ತು ಅನ್ನದಾನದ ಮೂಲಕ ನೆರವಾಗುತ್ತಿದ್ದಾರೆ.
ಕನ್ನಡ-ತುಳು ಸಂಸ್ಕೃತಿಯ ರಾಯಭಾರಿಯಾಗಿ ಸೇವೆ
ಯುಎಇಯಲ್ಲಿ ನೆಲೆಸಿರುವ ಕನ್ನಡಿಗರು ಮತ್ತು ತುಳುವರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ಭಾಷೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಂಪರೆಯ ಬಗ್ಗೆ ಅಭಿಮಾನ ಬೆಳೆಸುವಲ್ಲಿ ಸತೀಶ್ ಪೂಜಾರಿ ಅವರ ಪಾತ್ರ ಗಮನಾರ್ಹವಾಗಿದೆ.
ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ಸಂಚಾಲಕರಾಗಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಯುಎಇ ಘಟಕದ ಟ್ರಸ್ಟಿಯಾಗಿ, ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಟ್ರಸ್ಟಿಯಾಗಿ ಹಾಗೂ ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿಯ ಸಕ್ರಿಯ ಸದಸ್ಯರಾಗಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಹಲವು ಪ್ರಶಸ್ತಿಗಳ ಗರಿ
ಸಮಾಜಸೇವೆ, ಸಂಘಟನಾ ಚಟುವಟಿಕೆ ಹಾಗೂ ಕಲಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳಿಗಾಗಿ ಈಗಾಗಲೇ ಚಾಣಕ್ಯ ಪ್ರಶಸ್ತಿ, ಬಿಲ್ಲವ ಶ್ರೀರತ್ನ ಪ್ರಶಸ್ತಿ, ಹೆಮ್ಮೆಯ ಕನ್ನಡಿಗ ಪ್ರಶಸ್ತಿ, ಕಲಾಪೋಷಕ ಪ್ರಶಸ್ತಿ ಮತ್ತು ಪರಿವರ್ತನ ಶ್ರೀ ರಾಜ್ಯ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಇವರಿಗೆ ಸಂದಿವೆ.
ಇದರೊಂದಿಗೆ ಕರ್ನಾಟಕ ಹಾಗೂ ಹೊರನಾಡಿನ ಕನ್ನಡಿಗರಿಗೆ ದುಬೈಯಲ್ಲಿ ಉದ್ಯೋಗಾವಕಾಶಗಳನ್ನು ಕಲ್ಪಿಸಿಕೊಟ್ಟು ಅನೇಕ ಕುಟುಂಬಗಳ ಬದುಕಿಗೆ ಆಸರೆಯಾಗಿದ್ದಾರೆ. ಉದ್ಯೋಗದ ನಿಮಿತ್ತ ವಿದೇಶದಲ್ಲಿ ನೆಲೆಸಿದ್ದರೂ ತಾಯ್ನಾಡಿನ ಜನರ ಸಂಕಷ್ಟಗಳಿಗೆ ಸ್ಪಂದಿಸುವುದು, ವಿದ್ಯಾರ್ಥಿಗಳ ಭವಿಷ್ಯಕ್ಕೆ ನೆರವಾಗುವುದು ಹಾಗೂ ಕನ್ನಡ-ತುಳು ಸಂಸ್ಕೃತಿಯ ಬೆಳವಣಿಗೆಗೆ ಶ್ರಮಿಸುವುದು ಅವರ ಸೇವೆಯ ವಿಶೇಷತೆಯಾಗಿದೆ.
ಎರಡೂವರೆ ದಶಕಗಳಿಗೂ ಹೆಚ್ಚು ಕಾಲ ಸಮಾಜ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆಗೆ 2026ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ರೂಪದಲ್ಲಿ ಮತ್ತೊಂದು ಮಹತ್ವದ ಮನ್ನಣೆ ದೊರೆತಿದೆ. ಸತೀಶ್ ಪೂಜಾರಿ ಬೆಳಪು ಅವರ ಸಾಧನೆಗೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಪದಾಧಿಕಾರಿಗಳು, ಹಿತೈಷಿಗಳು ಹಾಗೂ ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ

