ಮುಂಡಗೋಡ: ಅಪ್ರಾಪ್ತ ವಯಸ್ಸಿನ ಆರನೇ ತರಗತಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಗಂಭೀರ ಪ್ರಕರಣವೊಂದು ಮುಂಡಗೋಡ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 65 ವರ್ಷದ ಇಸ್ಮಾಯಿಲ್ ಹುಲಗೂರ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪರಿಶಿಷ್ಟ ಪಂಗಡಕ್ಕೆ ಸೇರಿದ ಬಾಲಕಿಯನ್ನು ಪುಸಲಾಯಿಸಿ, ಚಾಕು ತೋರಿಸಿ ಬೆದರಿಸುವ ಮೂಲಕ ಆರೋಪಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ವಿಷಯವನ್ನು ಮನೆಯವರಿಗೆ ತಿಳಿಸಿದರೆ ಜೀವ ತೆಗೆಯುವುದಾಗಿ ಬೆದರಿಕೆ ಹಾಕಿದ್ದನೆನ್ನಲಾಗಿದೆ.
ಸದ್ಯ ಬಾಲಕಿ ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದು, ಇನ್ನೊಂದು ವಾರದೊಳಗೆ ಹೆರಿಗೆಯಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಬಾಲಕಿಯ ಗರ್ಭಧಾರಣೆಯ ವಿಚಾರ ಮನೆಯವರಿಗೆ ತಿಳಿದಿರಲಿಲ್ಲ. ಹೊಟ್ಟೆನೋವಿನಿಂದ ಬಾಲಕಿ ಬಳಲುತ್ತಿದ್ದ ಸಂದರ್ಭದಲ್ಲಿ ಈ ಆಘಾತಕಾರಿ ಸಂಗತಿ ಬಹಿರಂಗವಾಗಿದೆ.
ಆಕ್ರೋಶಗೊಂಡ ಗ್ರಾಮಸ್ಥರಿಂದ ಮನೆ ಧ್ವಂಸ
ಘಟನೆ ಬಹಿರಂಗವಾಗುತ್ತಿದ್ದಂತೆ ಗ್ರಾಮದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದಲಿತ ಹಾಗೂ ಹಿಂದೂ ಸಂಘಟನೆಗಳು ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಇಂತಹ ಅಮಾನವೀಯ ಕೃತ್ಯ ಎಸಗಿದ ಆರೋಪಿಗೆ ಗರಿಷ್ಠ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿವೆ.
ಇದೇ ವೇಳೆ ಆಕ್ರೋಶಗೊಂಡ ಕೆಲ ಗ್ರಾಮಸ್ಥರು ಶನಿವಾರ ರಾತ್ರಿ ಆರೋಪಿಯ ಮನೆಗೆ ನುಗ್ಗಿ ಹಾನಿ ಮಾಡಿ ಧ್ವಂಸಗೊಳಿಸಿದ್ದಾರೆ ಎನ್ನಲಾಗಿದೆ. ಇದರಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಎಸ್ಪಿ ಭೇಟಿ: ಪೊಲೀಸ್ ಬಂದೋಬಸ್ತ್
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಡಿವೈಎಸ್ಪಿ ಗೀತಾ ಪಾಟೀಲ, ಸಿಪಿಐ ರಮೇಶ ಹಾನಾಪುರ, ಪಿಎಸ್ಐ ಮಂಜುನಾಥ ಗೌಡರ ಸೇರಿದಂತೆ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದರು.
ತಡರಾತ್ರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೃಷ್ಣಮೂರ್ತಿ ಅವರು ಗ್ರಾಮಕ್ಕೆ ಭೇಟಿ ನೀಡಿ ಘಟನೆಯ ಕುರಿತು ಮಾಹಿತಿ ಸಂಗ್ರಹಿಸಿದರು.
ಮುಂದಿನ ದಿನಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿರುವ ಪೊಲೀಸರು ಭಾನುವಾರವೂ ಗ್ರಾಮದಲ್ಲಿ ಬಿಗಿ ಬಂದೋಬಸ್ತ್ ಮುಂದುವರಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

