ಮಂಗಳೂರು: ಅಪ್ರಾಪ್ತ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಲೆನ್ಸಿಯಾದ ಸೈಂಟ್ ವಿನ್ಸೆಂಟ್ ಫೆರೇರಾ ಚರ್ಚ್ನ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ ಅವರ ವಿರುದ್ಧ ಮಂಗಳೂರಿನಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಈ ಹಿಂದೆ ಇದೇ ರೀತಿಯ ಆರೋಪದಡಿ ಪ್ರಕರಣ ಎದುರಿಸುತ್ತಿರುವ ಅವರ ವಿರುದ್ಧ ಇದೀಗ ಎರಡನೇ ದೂರು ದಾಖಲಾಗಿರುವುದು ಬೆಳಕಿಗೆ ಬಂದಿದೆ.
ಪೆರ್ಮನ್ನೂರು ಗ್ರಾಮದ ಸೈಂಟ್ ಸೆಬಾಸ್ಟಿಯನ್ ಚರ್ಚ್ಗೆ ಪ್ರತಿ ಭಾನುವಾರ ಪ್ರಾರ್ಥನೆಗೆ ತೆರಳುತ್ತಿದ್ದ 13 ವರ್ಷದ ಬಾಲಕನಿಗೆ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ (65) ಅವರು 2026ರ ಮೇ 13ರಂದು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಸಂತ್ರಸ್ತ ಬಾಲಕನ ಪರವಾಗಿ ನೀಡಲಾದ ದೂರಿನ ಮೇರೆಗೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 50/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಕಲಂ 75(2) ಹಾಗೂ ಪೋಕ್ಸೋ ಕಾಯ್ದೆಯ ಕಲಂ 8 ಮತ್ತು 12ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಇದಕ್ಕೂ ಮೊದಲು, 14 ವರ್ಷದ ಮತ್ತೊಬ್ಬ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅಕ್ಟೋಬರ್ 15ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಫಾ. ಸಿಪ್ರಿಯನ್ ಪಿಂಟೋ ವಿರುದ್ಧ ಅಪರಾಧ ಕ್ರಮಾಂಕ 212/2026ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಫಾ. ಸಿಪ್ರಿಯನ್ ಪಿಂಟೋ ಅವರನ್ನು ಬಂಧಿಸಿ ಅಕ್ಟೋಬರ್ 18ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅಕ್ಟೋಬರ್ 30ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದ ಅವರು ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.
ಇದೀಗ ದಾಖಲಾಗಿರುವ ಎರಡನೇ ಪ್ರಕರಣದ ಮುಂದಿನ ತನಿಖೆಯ ಜವಾಬ್ದಾರಿಯನ್ನು ಮಂಗಳೂರು ನಗರ ಕೇಂದ್ರ ಉಪವಿಭಾಗದ ಎಸಿಪಿ ಅವರಿಗೆ ವಹಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

