ಬೆಂಗಳೂರು : ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಿಹಿಸುದ್ದಿ ನೀಡಿದೆ. ರೇಷನ್ ಕಾರ್ಡ್ಗೆ ಸಂಬಂಧಿಸಿದ ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ನವೆಂಬರ್ 30, 2026ರವರೆಗೆ ವಿಸ್ತರಿಸಲಾಗಿದೆ.
ಈ ಹಿಂದೆ ಇ-ಕೆವೈಸಿ ಪೂರ್ಣಗೊಳಿಸಲು ನವೆಂಬರ್ 10 ಕೊನೆಯ ದಿನಾಂಕ ಎಂದು ನಿಗದಿಪಡಿಸಲಾಗಿತ್ತು. ಆದರೆ ರಾಜ್ಯದಲ್ಲಿ ಇನ್ನೂ ಲಕ್ಷಾಂತರ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಳ್ಳುವುದು ಬಾಕಿ ಇರುವ ಹಿನ್ನೆಲೆಯಲ್ಲಿ ಇಲಾಖೆ ಹೆಚ್ಚುವರಿ ಕಾಲಾವಕಾಶ ಕಲ್ಪಿಸಿದೆ.
ರಾಜ್ಯದಲ್ಲಿರುವ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿಗಳಲ್ಲಿನ ಪ್ರತಿಯೊಬ್ಬ ಫಲಾನುಭವಿಯೂ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಇ-ಕೆವೈಸಿ ಮಾಡಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಪಡಿತರ ವಿತರಣೆಯಲ್ಲಿ ವ್ಯತ್ಯಯ ಉಂಟಾಗುವ ಅಥವಾ ನಿಯಮಾನುಸಾರ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ಎರಡು ವಿಧಾನಗಳಲ್ಲಿ ಇ-ಕೆವೈಸಿ
ಪಡಿತರ ಚೀಟಿದಾರರು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಬಹುದು. ಇಲ್ಲವೇ ಮನೆಯಲ್ಲಿಯೇ ಕುಳಿತು ಸರ್ಕಾರದ ‘ಅನ್ನಸೇವೆ’ ಮೊಬೈಲ್ ಆ್ಯಪ್ ಮೂಲಕವೂ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು.
ಆ್ಯಪ್ನಲ್ಲಿ ಸ್ವಯಂ/ನಾಗರಿಕ ಆಯ್ಕೆ ಮಾಡಿಕೊಂಡು ಜಿಲ್ಲೆ ಮತ್ತು ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಿ, ಮೊಬೈಲ್ಗೆ ಬರುವ ಒಟಿಪಿ ಪರಿಶೀಲನೆಯ ಬಳಿಕ ಮುಖ ಗುರುತಿಸುವಿಕೆ (Face Authentication) ಮೂಲಕ ಇ-ಕೆವೈಸಿ ಪೂರ್ಣಗೊಳಿಸಬಹುದು.
ಹೀಗಾಗಿ ಇನ್ನೂ ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರು ನವೆಂಬರ್ 30ರೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಇಲಾಖೆ ಮನವಿ ಮಾಡಿದೆ.

