ಬೆಂಗಳೂರು : ಇನ್ನೇನು ಕೆಲವೇ ದಿನಗಳಲ್ಲಿ ಮದುವೆ ಬಂಧನಕ್ಕೆ ಒಳಗಾಗಬೇಕಿದ್ದ ಯುವತಿಯೊಬ್ಬಳು ಭೀಕರ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಸಂಭವಿಸಿದೆ. ವೇಗವಾಗಿ ಬಂದ ಲಾರಿಯೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮದುವೆಯ ಸಿದ್ಧತೆಯಲ್ಲಿ ತೊಡಗಿದ್ದ ಕುಟುಂಬದಲ್ಲಿ ಇದೀಗ ಆಕ್ರಂದನ ಮುಗಿಲು ಮುಟ್ಟಿದೆ.
ಮೃತರನ್ನು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಐತನಹಳ್ಳಿ ಗ್ರಾಮದ ಸಿಂಧುಶ್ರೀ ಹಾಗೂ ಅವರ ಅತ್ತೆಯ ಮಗಳು ವಿದ್ಯಾ ಎಂದು ಗುರುತಿಸಲಾಗಿದೆ. ಸಿಂಧುಶ್ರೀ ಅವರ ವಿವಾಹ ನವೆಂಬರ್ 16ರಂದು ನಿಗದಿಯಾಗಿದ್ದು, ಅದಕ್ಕೂ ಹಿಂದಿನ ದಿನ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮದುವೆಯ ಆಹ್ವಾನ ಪತ್ರಿಕೆಗಳನ್ನು ಸಂಬಂಧಿಕರಿಗೆ ತಲುಪಿಸುವ ಉದ್ದೇಶದಿಂದ ಸಿಂಧುಶ್ರೀ ಅವರು ಕಾಲೇಜು ವಿದ್ಯಾರ್ಥಿನಿಯಾಗಿದ್ದ ವಿದ್ಯಾ ಜೊತೆ ಸ್ಕೂಟಿಯಲ್ಲಿ ತೆರಳಿದ್ದರು.
ಮಧ್ಯಾಹ್ನ ಸುಮಾರು 3.30ರ ವೇಳೆಗೆ ಮೈಸೂರು ರಸ್ತೆಯ ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದ ಸಮೀಪ ಇವರ ಸ್ಕೂಟಿಗೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟಿದ್ದು, ಲಾರಿಯ ಚಕ್ರ ಅವರ ಮೇಲೆಯೇ ಹರಿದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತ ಸಂಭವಿಸುತ್ತಿದ್ದಂತೆಯೇ ಲಾರಿ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಬ್ಯಾಟರಾಯನಪುರ ಸಂಚಾರಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಮದುವೆಯ ಆಮಂತ್ರಣ ಪತ್ರಿಕೆ ಹಂಚಲು ಸಂತೋಷದಿಂದ ಹೊರಟಿದ್ದ ಸಿಂಧುಶ್ರೀ, ಇನ್ನೇನು ಕೆಲವೇ ದಿನಗಳಲ್ಲಿ ವಧುವಾಗಿ ಹೊಸ ಬದುಕಿಗೆ ಕಾಲಿಡಬೇಕಿತ್ತು. ಆದರೆ ವಿಧಿಯ ಕ್ರೂರ ಆಟಕ್ಕೆ ಇಬ್ಬರು ಯುವತಿಯರು ಬಲಿಯಾಗಿದ್ದು, ಮದುವೆಯ ಸಂಭ್ರಮದಲ್ಲಿದ್ದ ಕುಟುಂಬಗಳೆಲ್ಲವೂ ಶೋಕಸಾಗರದಲ್ಲಿ ಮುಳುಗಿದೆ.

