ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.
ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ವೊಂದರಲ್ಲಿ ಬಾಂಗ್ಲಾದೇಶ ಮೂಲದ ಇಬ್ಬರು ವ್ಯಕ್ತಿಗಳು ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪಣಂಬೂರು ಠಾಣೆಯ ಪೊಲೀಸರು ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿ, ಅಲ್ಲಿ ಕೆಲಸ ಮಾಡುತ್ತಿದ್ದ ಅಶಿಕುಲ್ ಇಸ್ಲಾಂ ಹಾಗೂ ಎಂಡಿ ಅಮೀನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ವೇಳೆ ಇಬ್ಬರೂ ಯಾವುದೇ ಮಾನ್ಯ ದಾಖಲೆಗಳಿಲ್ಲದೆ ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಕಾನೂನು ಕ್ರಮವಾಗಿ ಅವರನ್ನು ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿ ಇರಿಸಿ, ಬಳಿಕ ವಿದೇಶಿಗರ ಪ್ರಾದೇಶಿಕ ನೋಂದಣಿ ಕಚೇರಿ (FRRO) ಮುಂದೆ ಹಾಜರುಪಡಿಸಲು ನಿರ್ಧರಿಸಲಾಗಿದೆ. ಅಲ್ಲದೆ, ಇಬ್ಬರನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವ ಸಂಬಂಧ ಪಣಂಬೂರು ಪೊಲೀಸರು ಕಾನೂನು ಪ್ರಕ್ರಿಯೆ ಆರಂಭಿಸಿದ್ದಾರೆ.
ಈ ಕಾರ್ಯಾಚರಣೆಯನ್ನು ಪಣಂಬೂರು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಲೀಂ ಅಬ್ಬಾಸ್ ಅವರ ನೇತೃತ್ವದಲ್ಲಿ ನಡೆಸಲಾಗಿದ್ದು, ಪಿಎಸ್ಐಗಳಾದ ಶ್ರೀಮತಿ ಶ್ರೀಕಲಾ ಕೆ.ಟಿ, ಜ್ಞಾನಶೇಖರ ಹಾಗೂ ಸಿಬ್ಬಂದಿಗಳಾದ ಇಮ್ತಿಯಾಝ್ ಫಕ್ಕಿರೇಶ್ ಮತ್ತು ರಾಕೇಶ್ ಎಲ್.ಎಂ. ಭಾಗವಹಿಸಿದ್ದರು.

