ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಆಶಾ ಕಾರ್ಯಕರ್ತೆಯರು ನವೆಂಬರ್ 17ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಿದ್ದಾರೆ.
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಮಾಸಿಕ ₹15,000 ನಿಶ್ಚಿತ ಗೌರವಧನ, 6 ತಿಂಗಳ ವೇತನ ಸಹಿತ ಹೆರಿಗೆ ರಜೆ, ಮೊಬೈಲ್ ಮತ್ತು ರೀಚಾರ್ಜ್ ಭತ್ಯೆ, ಬಾಕಿ ಪ್ರೋತ್ಸಾಹಧನ ಬಿಡುಗಡೆ ಹಾಗೂ ಸೇವೆಯಿಂದ ಕೈಬಿಟ್ಟ ಆಶಾ ಸುಗಮಕಾರರ ಮರುನೇಮಕ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಮುಂದಿಡಲಾಗಿದೆ.
ಕಳೆದ 18 ವರ್ಷಗಳಿಂದ ಆರೋಗ್ಯ ಸೇವೆಯಲ್ಲಿ ತೊಡಗಿಸಿಕೊಂಡಿರುವ ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ಪ್ರೋತ್ಸಾಹಧನ ಆಧಾರಿತ ವೇತನ ನೀಡಲಾಗುತ್ತಿದೆ. ಹಲವು ಬಾರಿ ಮನವಿ ಸಲ್ಲಿಸಿದರೂ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಹೋರಾಟಕ್ಕೆ ನಿರ್ಧರಿಸಲಾಗಿದೆ ಎಂದು ಸಂಘಟನೆ ತಿಳಿಸಿದೆ.

