ಮೈಸೂರು : ಪಡಿತರ ಚೀಟಿಗಳ ಇ-ಕೆವೈಸಿ (e-KYC) ಪ್ರಕ್ರಿಯೆಗಾಗಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುವ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಅಕ್ರಮಗಳಲ್ಲಿ ತೊಡಗಿರುವ ಅಂಗಡಿಗಳ ಪರವಾನಗಿಯನ್ನು ರದ್ದುಪಡಿಸುವುದರ ಜೊತೆಗೆ ಳಿಸಲಾಗುವುದು ಎಂದು ಸಚಿವ ರಿಜ್ವಾನ್ ಅರ್ಷದ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಮೈಸೂರಿನ ಬಂಡಿಪಾಳ್ಯದಲ್ಲಿರುವ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ರೇಷನ್ ಕಾರ್ಡ್ ಇ-ಕೆವೈಸಿ ಪ್ರಕ್ರಿಯೆ ಹಾಗೂ ನ್ಯಾಯಬೆಲೆ ಅಂಗಡಿಗಳ ಕಾರ್ಯವೈಖರಿ ಕುರಿತು ಮಾತನಾಡಿದರು.
ಇ-ಕೆವೈಸಿ ಮಾಡಿಸಿಕೊಳ್ಳಲು ಸಾರ್ವಜನಿಕರು ಯಾವುದೇ ರೀತಿಯ ಹಣ ಪಾವತಿಸುವ ಅಗತ್ಯವಿಲ್ಲ. ಆದರೆ, ಕೆಲವು ನ್ಯಾಯಬೆಲೆ ಅಂಗಡಿಗಳಲ್ಲಿ ಈ ಪ್ರಕ್ರಿಯೆಗಾಗಿ ಹಣ ಕೇಳಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿವೆ. ಇಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದೂರುಗಳು ಬಂದ ತಕ್ಷಣವೇ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಸಾರ್ವಜನಿಕರು ತಮ್ಮ ಮೊಬೈಲ್ಗಳಲ್ಲಿ ದಾಖಲಿಸಿರುವ ವಿಡಿಯೋಗಳ ಆಧಾರದ ಮೇಲೂ ಕ್ರಮ ಜರುಗಿಸಲಾಗಿದೆ. ಈಗಾಗಲೇ ಸುಮಾರು 10ರಿಂದ 12 ನ್ಯಾಯಬೆಲೆ ಅಂಗಡಿಗಳನ್ನು ಅಮಾನತುಗೊಳಿಸಲಾಗಿದೆ. ಅಕ್ರಮಗಳಿಗೆ ಸಹಕರಿಸಿದ ಆರೋಪದ ಮೇಲೆ ಕೆಲವು ಆಹಾರ ನಿರೀಕ್ಷಕರಿಗೂ ನೋಟಿಸ್ ಜಾರಿಗೊಳಿಸಿ, ಅಮಾನತು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಇದೇ ವೇಳೆ, ಇ-ಕೆವೈಸಿ ಪ್ರಕ್ರಿಯೆಯನ್ನು ಸರಳಗೊಳಿಸುವ ನಿಟ್ಟಿನಲ್ಲಿ ಜಾರಿಗೊಳಿಸಿರುವ ‘ಅನ್ನ ಸೇವಾ ಆಪ್’ ಕುರಿತು ಮಾತನಾಡಿದ ಅವರು, ಲಕ್ಷಾಂತರ ಜನರು ಈ ಆಪ್ ಮೂಲಕ ಸುಲಭವಾಗಿ ಇ-ಕೆವೈಸಿ ಪೂರ್ಣಗೊಳಿಸಿದ್ದಾರೆ. ವಿಶೇಷವಾಗಿ ವಲಸೆ ಕಾರ್ಮಿಕರಿಗೆ ಅನುಕೂಲವಾಗುವಂತೆ ಆಪ್ನಲ್ಲಿರುವ ಜಿಯೋ-ಫೆನ್ಸಿಂಗ್ ಸೌಲಭ್ಯವನ್ನು ದೇಶಾದ್ಯಂತ ವಿಸ್ತರಿಸಲಾಗಿದೆ. ಆರಂಭದಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದರೂ, ಇದೀಗ ಅವುಗಳನ್ನು ಪರಿಹರಿಸಲಾಗಿದೆ ಎಂದರು.
ರಾಜ್ಯದಲ್ಲಿರುವ ಶೇ.99ರಷ್ಟು ನ್ಯಾಯಬೆಲೆ ಅಂಗಡಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿವೆ. ಆದರೆ, ಶೇ.1ರಷ್ಟು ಅಂಗಡಿಗಳಲ್ಲಿ ನಡೆಯುವ ಅಕ್ರಮಗಳಿಂದ ಇಡೀ ವ್ಯವಸ್ಥೆಗೆ ಕೆಟ್ಟ ಹೆಸರು ಬರುವುದು ಸರಿಯಲ್ಲ ಎಂದು ಸಚಿವರು ಅಭಿಪ್ರಾಯಪಟ್ಟರು.
ಸಾರ್ವಜನಿಕರಿಗೆ ಸರ್ಕಾರದ ಸೌಲಭ್ಯಗಳನ್ನು ಯಾವುದೇ ತೊಂದರೆಯಿಲ್ಲದೆ ತಲುಪಿಸುವುದು ಇಲಾಖೆಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಇ-ಕೆವೈಸಿ ಹೆಸರಿನಲ್ಲಿ ಹಣ ವಸೂಲಿ ಮಾಡುವವರನ್ನು ಯಾವುದೇ ಕಾರಣಕ್ಕೂ ರಕ್ಷಿಸುವುದಿಲ್ಲ. ಇಂತಹ ಅಕ್ರಮಗಳು ಕಂಡುಬಂದಲ್ಲಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದುಗೊಳಿಸುವುದೂ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ರಿಜ್ವಾನ್ ಅರ್ಷದ್ ಎಚ್ಚರಿಕೆ ನೀಡಿದರು.

