ಮಂಗಳೂರು : ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಅವರಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಸಾರ್ವಜನಿಕ ಸನ್ಮಾನ ಸಮಿತಿಯ ವತಿಯಿಂದ ನವೆಂಬರ್ 23ರಂದು ಮಂಗಳೂರಿನಲ್ಲಿ ಅದ್ದೂರಿ ಸಾರ್ವಜನಿಕ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ಟಿ.ಎಂ. ಶಾಹೀದ್ ತೆಕ್ಕಿಲ್ ತಿಳಿಸಿದರು.
ಪ್ರೆಸ್ಕ್ಲಬ್ನಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ ಉದ್ಘಾಟಿಸಲಿದ್ದಾರೆ. ಬೆಂಗಳೂರು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಸ್ವಾಮೀಜಿ, ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಪಾಣಕ್ಕಾಡ್ ಸೈಯದ್ ನಾಸರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂಙಳ್ ಬಾಅಲವಿ ಹಾಗೂ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಫಾ.ಫ್ರಾನ್ಸಿಸ್ ಝೇವಿಯರ್ ಗೋಮ್ಸ್ ಆಶೀರ್ವಚನ ನೀಡಲಿದ್ದಾರೆ ಎಂದರು.

ಮಾಜಿ ಸಚಿವರಾದ ಬಿ. ರಮಾನಾಥ ರೈ ಮತ್ತು ವಿನಯ ಕುಮಾರ್ ಸೊರಕೆ ಅವರು ಸಲೀಂ ಅಹ್ಮದ್ ಅವರನ್ನು ಸನ್ಮಾನಿಸಲಿದ್ದು, ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅಭಿನಂದನಾ ಭಾಷಣ ಮಾಡಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ವಿದ್ಯಾರ್ಥಿ ನಾಯಕರಿಂದ ವಿಧಾನ ಪರಿಷತ್ ಸಭಾಪತಿವರೆಗೆ
ವಿದ್ಯಾರ್ಥಿ ನಾಯಕರಾಗಿ ಸಾರ್ವಜನಿಕ ಜೀವನ ಪ್ರವೇಶಿಸಿದ ಸಲೀಂ ಅಹ್ಮದ್ ಅವರು, ಕಾಂಗ್ರೆಸ್ ಪಕ್ಷದಲ್ಲಿ ಹಲವು ಪ್ರಮುಖ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಭಾರತೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿ ಸದಸ್ಯ, ತೆಲಂಗಾಣ ರಾಜ್ಯದ ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಅವರು, ವಿಧಾನ ಪರಿಷತ್ನ ಮುಖ್ಯ ಸಚೇತಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. 2026ರಲ್ಲಿ ಕರ್ನಾಟಕ ವಿಧಾನ ಪರಿಷತ್ನ ಸಭಾಪತಿಯಾಗಿ ಆಯ್ಕೆಯಾಗುವ ಮೂಲಕ ಮತ್ತೊಂದು ಮಹತ್ವದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
2017-18ರಲ್ಲಿ ಕರ್ನಾಟಕ ಸರಕಾರದ ದೆಹಲಿಯ ವಿಶೇಷ ಪ್ರತಿನಿಧಿಯಾಗಿ ಹಾಗೂ 2012ರಿಂದ 2014ರವರೆಗೆ ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರದ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ, ವಿವಿಧ ಅಂತಾರಾಷ್ಟ್ರೀಯ ಯುವ, ರಾಜಕೀಯ, ಸಾಂಸ್ಕೃತಿಕ ಮತ್ತು ಶಾಸಕಾಂಗ ನಿಯೋಗಗಳಲ್ಲಿ ಭಾರತದ ಪ್ರತಿನಿಧಿಯಾಗಿ ವಿದೇಶಗಳಲ್ಲಿ ಭಾಗವಹಿಸಿರುವ ಅನುಭವ ಹೊಂದಿದ್ದಾರೆ ಎಂದು ಶಾಹೀದ್ ತೆಕ್ಕಿಲ್ ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಗೌರವಾಧ್ಯಕ್ಷ ಕಳ್ಳಿಗೆ ತಾರನಾಥ ಶೆಟ್ಟಿ, ಕಾರ್ಯದರ್ಶಿ ಟಿ.ಕೆ. ಸುಧೀರ್, ಕೋಶಾಧಿಕಾರಿ ಅಶ್ವಿನ್ ಕುಮಾರ್ ರೈ ಹಾಗೂ ಸದಸ್ಯರಾದ ಶಾಹುಲ್ ಹಮೀದ್ ಮತ್ತು ಕಿರಣ್ ಬುಡ್ಡೆಗುತ್ತು ಉಪಸ್ಥಿತರಿದ್ದರು.

