ಮಂಗಳೂರು: ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್, ರೆಸ್ಟೋರೆಂಟ್, ಆಹಾರ ತಯಾರಿಕಾ ಘಟಕಗಳು ಸೇರಿದಂತೆ ವಿವಿಧ ಆಹಾರ ಉದ್ಯಮಗಳ ಮೇಲೆ ಅನಿರೀಕ್ಷಿತ ಪರಿಶೀಲನಾ ಕಾರ್ಯಾಚರಣೆ ನಡೆಸಿದರು.
ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿ.ಎಚ್. ಅವರ ನೇತೃತ್ವದಲ್ಲಿ ಐದು ತಂಡಗಳನ್ನು ರಚಿಸಿ ಜಿಲ್ಲೆಯ ವಿವಿಧೆಡೆ ಏಕಕಾಲದಲ್ಲಿ ತಪಾಸಣೆ ನಡೆಸಲಾಯಿತು.
ತಲಪಾಡಿಯ ಉಡುಪಿ ಕೆಫೆ ರೆಸ್ಟೋರೆಂಟ್ನ ಅಡುಗೆ ಕೋಣೆಗೆ ದಿಢೀರ್ ಭೇಟಿ ನೀಡಿದ ಅಧಿಕಾರಿಗಳು, ಆಹಾರ ತಯಾರಿಕೆ ವೇಳೆ ಸುರಕ್ಷತಾ ನಿಯಮಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿದರು. ಈ ವೇಳೆ ಆಹಾರದ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಲಾಯಿತು.
ತೊಕ್ಕೊಟ್ಟು ಸಮೀಪದ ಸೇವಂತಿಗುಡ್ಡೆಯಲ್ಲಿರುವ ಎಂ.ಆರ್. ಸ್ವೀಟ್ಸ್ ಘಟಕದ ಮೇಲೆ ದಾಳಿ ನಡೆಸಿದಾಗ, ಅಗತ್ಯ ನೈರ್ಮಲ್ಯ ಕ್ರಮಗಳನ್ನು ಅನುಸರಿಸದೆ ಸಿಹಿತಿಂಡಿಗಳು ಹಾಗೂ ಇತರ ಆಹಾರ ಪದಾರ್ಥಗಳನ್ನು ತಯಾರಿಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಆಹಾರ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಯಿತು.
ಇದೇ ವೇಳೆ ಕೊಲ್ಯದಲ್ಲಿರುವ ಐಡಿಯಲ್ ಐಸ್ಕ್ರೀಂ ಕೋಲ್ಡ್ ಸ್ಟೋರೇಜ್ ಘಟಕಕ್ಕೂ ಭೇಟಿ ನೀಡಿ, ಐಸ್ಕ್ರೀಂ ಸಂಗ್ರಹಣೆಯಲ್ಲಿ ಪಾಲಿಸಬೇಕಾದ ಆಹಾರ ಸುರಕ್ಷತಾ ನಿಯಮಗಳ ಕುರಿತು ಪರಿಶೀಲನೆ ನಡೆಸಲಾಯಿತು. ಪರಿಶೀಲನೆ ವೇಳೆ ಕಂಡುಬಂದ ಲೋಪದೋಷಗಳ ಹಿನ್ನೆಲೆಯಲ್ಲಿ ಘಟಕಕ್ಕೆ ನೋಟಿಸ್ ಜಾರಿಗೊಳಿಸಲಾಯಿತು.
ನೈರ್ಮಲ್ಯ ನಿಯಮಗಳನ್ನು ಪಾಲಿಸದೆ ಆಹಾರ ತಯಾರಿಸುತ್ತಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಡಿಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
ಆಹಾರ ಉದ್ಯಮಗಳು ಕಡ್ಡಾಯವಾಗಿ ಸ್ವಚ್ಛತೆ ಹಾಗೂ ಆಹಾರ ಸುರಕ್ಷತಾ ಮಾನದಂಡಗಳನ್ನು ಪಾಲಿಸಬೇಕು. ನಿಯಮ ಉಲ್ಲಂಘಿಸುವ ಘಟಕಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಕಾರ್ಯಾಚರಣೆಯ ಮೂಲಕ ಎಚ್ಚರಿಕೆ ನೀಡಲಾಗಿದೆ.

