ಬೆಳಗಾವಿ: ಪ್ರತಿಷ್ಠಿತ ಪ್ರದೇಶವಾದ ಆರ್ಪಿಡಿ ಕ್ರಾಸ್ನಲ್ಲಿರುವ ಸಲೂನ್ ಮತ್ತು ಸ್ಪಾ ಹೆಸರಿನಲ್ಲಿ ಅಕ್ರಮ ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಾ ಮಾಲೀಕ ಹಾಗೂ ಮ್ಯಾನೇಜರ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಆರ್ಪಿಡಿ ಕ್ರಾಸ್ನಲ್ಲಿರುವ ಡಿವೈನ್ ಸಲೂನ್ ಆ್ಯಂಡ್ ಸ್ಪಾದಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ್ ನಾಯಕ್ ನೇತೃತ್ವದ ತಂಡ ದಿಢೀರ್ ಕಾರ್ಯಾಚರಣೆ ನಡೆಸಿತು.

ದಾಳಿಯ ವೇಳೆ ಸಲೂನ್ ಮತ್ತು ಸ್ಪಾ ಚಟುವಟಿಕೆಗಳ ಸೋಗಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಹೊರರಾಜ್ಯಗಳಿಂದ ಮಹಿಳೆಯರನ್ನು ಕರೆತಂದು ಅನೈತಿಕ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿತ್ತು ಎಂಬ ಆರೋಪವೂ ಕೇಳಿಬಂದಿದೆ.

ಕಾರ್ಯಾಚರಣೆಯಲ್ಲಿ ಗುಜರಾತ್ ಮತ್ತು ಮುಂಬೈ ಮೂಲದವರು ಎನ್ನಲಾದ ನಾಲ್ವರು ಯುವತಿಯರನ್ನು ಪೊಲೀಸರು ರಕ್ಷಿಸಿದ್ದಾರೆ. ಮಹಿಳೆಯರನ್ನು ಅನೈತಿಕ ಚಟುವಟಿಕೆಗಳಿಗೆ ತೊಡಗಿಸಿಕೊಂಡ ಆರೋಪದ ಮೇಲೆ ಸ್ಪಾ ಮಾಲೀಕ ಮತ್ತು ವ್ಯವಸ್ಥಾಪಕರನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

