ಮಂಗಳೂರು: ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ವೆಲೆನ್ಸಿಯಾ ಚರ್ಚ್ನ ಧರ್ಮಗುರು ಸಿಪ್ರಿಯನ್ ಪಿಂಟೊ ಅವರನ್ನು ಪೊಲೀಸರು ಮತ್ತೊಮ್ಮೆ ಬಂಧಿಸಿದ್ದಾರೆ.
ಪೆರ್ಮನ್ನೂರು ಚರ್ಚ್ನಲ್ಲಿ ಧರ್ಮಗುರುವಾಗಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಡಿಸೆಂಬರ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಇದಕ್ಕೂ ಮೊದಲು ವೆಲೆನ್ಸಿಯಾ ಚರ್ಚ್ನಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಪ್ರಕರಣದಲ್ಲಿ ಸಿಪ್ರಿಯನ್ ಪಿಂಟೊ ಅವರನ್ನು ಬಂಧಿಸಲಾಗಿತ್ತು. ಬಳಿಕ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಈ ಬೆಳವಣಿಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.
ಮೈಸೂರಿನ ಒಡನಾಡಿ ಸಂಸ್ಥೆಯ ಮುಖಂಡರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಪೋಕ್ಸೋ ಪ್ರಕರಣದ ಆರೋಪಿಯಾಗಿರುವ ಧರ್ಮಗುರುಗಳಿಗೆ ಜಾಮೀನು ನೀಡಿರುವುದನ್ನು ತೀವ್ರವಾಗಿ ಖಂಡಿಸಿದ್ದರು. ಇದೀಗ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅವರನ್ನು ಪುನಃ ಬಂಧಿಸಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

