ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೌಡಿಸಂ ಹಾಗೂ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಭಾನುವಾರ ಬೆಳ್ಳಂಬೆಳಗ್ಗೆ ಸಿಸಿಬಿ ರೌಡಿ ಸ್ಕ್ವಾಡ್ ಅಧಿಕಾರಿಗಳು ನಗರದ ವಿವಿಧ ಭಾಗಗಳಲ್ಲಿರುವ 100ಕ್ಕೂ ಹೆಚ್ಚು ರೌಡಿಶೀಟರ್ಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.
ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಗುರುತಿಸಲಾಗಿರುವ ರೌಡಿಶೀಟರ್ಗಳ ಮನೆಗಳಿಗೆ ಭೇಟಿ ನೀಡಿದ ಪೊಲೀಸರು, ಅವರ ಪ್ರಸ್ತುತ ಚಟುವಟಿಕೆಗಳು, ಸಂಪರ್ಕಗಳು ಹಾಗೂ ಅಪರಾಧ ಹಿನ್ನೆಲೆಯ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ. ರೌಡಿಶೀಟರ್ಗಳು ಸದ್ಯ ಯಾವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ? ಯಾವುದೇ ಕಾನೂನುಬಾಹಿರ ವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆಯೇ? ಎಂಬ ಬಗ್ಗೆಯೂ ಪರಿಶೀಲನೆ ನಡೆಸಲಾಗಿದೆ.
ಸಿಎಂ ಸೂಚನೆ ಬೆನ್ನಲ್ಲೇ ಪೊಲೀಸ್ ಆ್ಯಕ್ಷನ್
ಇತ್ತೀಚೆಗೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ನಗರದಲ್ಲಿ ರೌಡಿಸಂಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ರೌಡಿಶೀಟರ್ಗಳ ಮೇಲೆ ನಿರಂತರ ನಿಗಾ ಇರಿಸುವುದರ ಜೊತೆಗೆ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು. ಈ ಸೂಚನೆಯ ಬೆನ್ನಲ್ಲೇ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆಗೆ ಮುಂದಾಗಿದೆ.
ಪೊಲೀಸ್ ಆಯುಕ್ತರಿಂದಲೂ ಕಟ್ಟುನಿಟ್ಟಿನ ಸೂಚನೆ
ನೂತನ ಪೊಲೀಸ್ ಆಯುಕ್ತ ಆರ್. ಹಿತೇಂದ್ರ ಅವರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರೌಡಿ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರೌಡಿಶೀಟರ್ಗಳ ಚಲನವಲನಗಳ ಮೇಲೆ ನಿಗಾ ಇರಿಸುವುದು ಮತ್ತು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದು ಕಾರ್ಯಾಚರಣೆಯ ಪ್ರಮುಖ ಉದ್ದೇಶವಾಗಿದೆ.
ಹೆಣ್ಣೂರು ಜ್ಯೋತಿನಗರದಲ್ಲೂ ಪರಿಶೀಲನೆ
ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯೋತಿನಗರದಲ್ಲಿರುವ ರೌಡಿಶೀಟರ್ ಕಿಶೋರ್ ಅಲಿಯಾಸ್ ಗುಡ್ಡೆ ಅವರ ಮನೆಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರದ ವಿವಿಧ ಪ್ರದೇಶಗಳಲ್ಲಿ ಸ್ಥಳೀಯ ಪೊಲೀಸ್ ಠಾಣೆಗಳ ಸಿಬ್ಬಂದಿಯ ಸಹಕಾರದೊಂದಿಗೆ ಕಾರ್ಯಾಚರಣೆ ಮುಂದುವರಿದಿದೆ.
ರೌಡಿ ಸ್ಕ್ವಾಡ್ ಮುಖ್ಯಸ್ಥ ಹಾಗೂ ಸಂಚಾರ ವಿಭಾಗದ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ಕಾರ್ಯಾಚರಣೆಯ ನೇತೃತ್ವ ವಹಿಸಿದ್ದು, ಪೊಲೀಸ್ ಆಯುಕ್ತ ಆರ್. ಹಿತೇಂದ್ರ ಅವರೂ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು, ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವುದು ಹಾಗೂ ಸಾರ್ವಜನಿಕರಲ್ಲಿ ಸುರಕ್ಷತೆಯ ಭಾವನೆ ಮೂಡಿಸುವುದು ಈ ವಿಶೇಷ ಕಾರ್ಯಾಚರಣೆಯ ಉದ್ದೇಶವಾಗಿದೆ.

