ಮಂಗಳೂರು: ಎಂಪಿಎಂಎಲ್ ಎ ನ್ಯೂಸ್ ವತಿಯಿಂದ ಆಯೋಜಿಸಲಾಗುತ್ತಿರುವ 14ನೇ ಸೌಹಾರ್ದ ಸಂಗಮ ಕಾರ್ಯಕ್ರಮ ನವೆಂಬರ್ 24ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದ (ಟೌನ್ಹಾಲ್)ನಲ್ಲಿ ಸಂಜೆ 4ರಿಂದ ರಾತ್ರಿ 9ರವರೆಗೆ ನಡೆಯಲಿದೆ ಎಂದು ಎಂಪಿಎಂಎಲ್ ಎ ನ್ಯೂಸ್ ಸಂಪಾದಕರಾದ ಡಾ.ಅಶೋಕ್ ಶೆಟ್ಟಿ ಬಿ.ಎನ್ ಹೇಳಿದರು.
ಪ್ರೆಸ್ ಕ್ಲಬ್ನಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಯು.ಟಿ. ಖಾದರ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮತ್ತು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಜನಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರಿಗೆ ಸಮಾಜ ರತ್ನ ಪ್ರಶಸ್ತಿ, ಕೆಎಸ್ಆರ್ಟಿಸಿ ಮಂಗಳೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಅವರಿಗೆ ಬೆಸ್ಟ್ ಆಫೀಸರ್ಸ್ ಅವಾರ್ಡ್ ಹಾಗೂ ಕೆಎಂಸಿ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಹೆಚ್ಚುವರಿ ಪ್ರಾಧ್ಯಾಪಕಿ, ಲ್ಯಾಪರೋಸ್ಕೋಪಿಕ್ ಶಸ್ತ್ರಚಿಕಿತ್ಸಕಿ ಡಾ. ನೀನಾ ಎ. ಮಹಾಲೆ ಅವರಿಗೆ ಬೆಸ್ಟ್ ಡಾಕ್ಟರ್ಸ್ ಅವಾರ್ಡ್ ನೀಡಿ ಸನ್ಮಾನಿಸಲಾಗುವುದು.
ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಡಾ.ಎ.ಸದಾನಂದ ಶೆಟ್ಟಿ ಹಾಗೂ ಹಿರಿಯ ನ್ಯಾಯವಾದಿ ಕೆ. ದಯಾನಂದ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಬಿ. ರಮಾನಾಥ ರೈ ಅಧ್ಯಕ್ಷತೆ ವಹಿಸಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು, ಆರ್ಬಿಐ ಉತ್ತರ ವಲಯದ ಮಾಜಿ ನಿರ್ದೇಶಕ ಡಾ.ಅಗರಿ ನವೀನ್ ಭಂಡಾರಿ, ಮಂಗಳೂರು ಮಾಜಿ ಮೇಯರ್ ದಿವಾಕರ್ ಕದ್ರಿ ಸೇರಿದಂತೆ ಹಲವು ಗಣ್ಯರು ಪ್ರಶಸ್ತಿ ಪುರಸ್ಕೃತರನ್ನು ಗೌರವಿಸಲಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಅಸ್ರಣ್ಣ ಆಶೀರ್ವಚನ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಉದ್ಯಮಿಗಳು, ವೈದ್ಯರು, ನ್ಯಾಯವಾದಿಗಳು ಹಾಗೂ ಪತ್ರಕರ್ತರು ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಚಲನಚಿತ್ರ ಗಾಯಕ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವೀಂದ್ರ ಪ್ರಭು ಮತ್ತು ಬಳಗದ ರಾಗ್ರಂಗ್ ತಂಡದಿಂದ ಸೌಹಾರ್ದ ಸಂಗೀತ ರಸಮಂಜರಿ ನಡೆಯಲಿದೆ. ಸಂಜೆ 6 ಗಂಟೆಗೆ ನರೇಶ್ ಸಸಿಹಿತ್ತು ನಿರ್ದೇಶನದಲ್ಲಿ ತ್ರಿನೇತ್ರ ಕಲಾವಿದರಿಂದ ಈ ವರ್ಷದ ಜನಪ್ರಿಯ ತುಳು ನಾಟಕ ‘ಬ್ರಹ್ಮರಕ್ಕಸೆ‘ ಉಚಿತ ಪ್ರದರ್ಶನಗೊಳ್ಳಲಿದೆ. ವಿಭಿನ್ನ ತಂತ್ರಜ್ಞಾನ ಮತ್ತು ಅದ್ದೂರಿ ರಂಗಸಜ್ಜಿಕೆಯೊಂದಿಗೆ ಮೂಡಿಬರಲಿರುವ ಈ ನಾಟಕಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಂಗಳೂರು ಪ್ರಾಯೋಜಕತ್ವ ನೀಡಿದೆ.
ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೌಹಾರ್ದ ಸಂಗಮವನ್ನು ಯಶಸ್ವಿಗೊಳಿಸುವಂತೆ ಸಂಘಟಕ ಡಾ.ಅಶೋಕ್ ಶೆಟ್ಟಿ ಬಿ.ಎನ್. ಮನವಿ ಮಾಡಿದ್ದಾರೆ.

