ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹಿಂದುಳಿದ ಸಮಾಜಗಳ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ತಮ್ಮ ಬದುಕನ್ನೇ ಮುಡಿಪಾಗಿಟ್ಟ ಹಿರಿಯ ಸಮಾಜಸೇವಕ ದಿವಂಗತ ದಾಮೋದರ ಆರ್. ಸುವರ್ಣ ಅವರ 102ನೇ ಜನ್ಮಜಯಂತಿಯ ಅಂಗವಾಗಿ ನವೆಂಬರ್ 29ರಂದು ಮಂಗಳೂರಿನ ಕುದ್ರೋಳಿಯಲ್ಲಿ ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ ಎಂದು ನವೀನ್ ಚಂದ್ರ ಸುವರ್ಣ ಹೇಳಿದರು.
ಪತ್ರಿಕಾಭವನದಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ದಾಮೋದರ ಆರ್. ಸುವರ್ಣ ಅವರು ತಮ್ಮ 69 ವರ್ಷಗಳ ಬದುಕನ್ನು ವೈಯಕ್ತಿಕ ಮತ್ತು ಕೌಟುಂಬಿಕ ಹಿತಾಸಕ್ತಿಗೆ ಸೀಮಿತಗೊಳಿಸದೆ, ಇಡೀ ಹಿಂದುಳಿದ ಸಮಾಜದ ಏಳಿಗೆಗಾಗಿ ಶ್ರಮಿಸಿದ ಅಪರೂಪದ ಸಮಾಜಮುಖಿ ವ್ಯಕ್ತಿತ್ವವಾಗಿದ್ದರು. ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳಿಂದ ಪ್ರೇರಿತರಾಗಿ ಸಮಾಜದ ಸಂಘಟನೆ, ಶಿಕ್ಷಣ ಮತ್ತು ಬಡವರ ಕಲ್ಯಾಣಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ.
1976ರಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್ನ ಆಡಳಿತ ಚುಕ್ಕಾಣಿ ಹಿಡಿದ ಅವರು, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರವಾಸ ಕೈಗೊಂಡು ಬಿಲ್ಲವ ಸಮಾಜವನ್ನು ಸಂಘಟಿಸುವ ಕಾರ್ಯಕ್ಕೆ ವೇಗ ನೀಡಿದರು. ಗ್ರಾಮೀಣ ಪ್ರದೇಶಗಳಲ್ಲಿಯೂ ಬಿಲ್ಲವ ಸಂಘಟನೆಗಳು ಹುಟ್ಟಿಕೊಳ್ಳಲು ಕಾರಣರಾದರು.

ಬಡಮಕ್ಕಳಿಗೂ ಗುಣಮಟ್ಟದ ಇಂಗ್ಲಿಷ್ ಮಾಧ್ಯಮ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ 1977ರಲ್ಲಿ ಕುದ್ರೋಳಿಯಲ್ಲಿ ನಾರಾಯಣ ಗುರು ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿದರು. ಆರಂಭದಲ್ಲಿ ಸೀಮಿತ ಸೌಲಭ್ಯಗಳೊಂದಿಗೆ ಪ್ರಾರಂಭವಾದ ಈ ಸಂಸ್ಥೆ ಇಂದು ಪ್ರಾಥಮಿಕ, ಪ್ರೌಢ, ಪದವಿಪೂರ್ವ, ಪದವಿ ಹಾಗೂ ತಾಂತ್ರಿಕ ಶಿಕ್ಷಣ ವಿಭಾಗಗಳಾಗಿ ಬೆಳೆದಿದ್ದು, ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದೆ. ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಸಂಸ್ಥೆ ಮಹತ್ವದ ಪಾತ್ರ ವಹಿಸಿದೆ.
ಸಮಾಜಸೇವೆಯ ಜೊತೆಗೆ ಆರೋಗ್ಯ ಕ್ಷೇತ್ರಕ್ಕೂ ಅವರು ವಿಶೇಷ ಆದ್ಯತೆ ನೀಡಿದ್ದರು.1980ರಲ್ಲಿ ಎರಡು ವ್ಯಾನ್ಗಳ ಮೂಲಕ ಸಂಚಾರಿ ಚಿಕಿತ್ಸಾಲಯ ಆರಂಭಿಸಿ, ವೈದ್ಯರ ತಂಡದೊಂದಿಗೆ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಬಡಜನರಿಗೆ ಉಚಿತ ವೈದ್ಯಕೀಯ ಸೇವೆ ಒದಗಿಸಿದ್ದರು. ಬಡ ಹೆಣ್ಣುಮಕ್ಕಳ ವಿವಾಹಕ್ಕೆ ನೆರವಾಗುವ ಉದ್ದೇಶದಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಆಯೋಜಿಸುವುದರೊಂದಿಗೆ, ದೀನದಲಿತರ ಕಲ್ಯಾಣಕ್ಕೂ ವಿಶೇಷ ಅನುದಾನಗಳನ್ನು ಒದಗಿಸಿದ್ದರು.
ನ.29ರಂದು ವಿಶೇಷ ಕಾರ್ಯಕ್ರಮ
ದಾಮೋದರ ಆರ್. ಸುವರ್ಣ ಅವರ ಸಮಾಜಮುಖಿ ಚಿಂತನೆ ಮತ್ತು ಆದರ್ಶಗಳನ್ನು ಮುಂದುವರಿಸುವ ಉದ್ದೇಶದಿಂದ ನವೆಂಬರ್ 29ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಕುದ್ರೋಳಿಯ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ.
ಈ ಸಂದರ್ಭದಲ್ಲಿ ವೃತ್ತಿಪರ ಶಿಕ್ಷಣ ಪಡೆಯುತ್ತಿರುವ ಆರ್ಥಿಕವಾಗಿ ಹಿಂದುಳಿದ ಸಮಾಜದ ವಿದ್ಯಾರ್ಥಿಗಳಿಗೆ ಒಟ್ಟು 80 ಲಕ್ಷ ರೂ.ಗೂ ಅಧಿಕ ಮೊತ್ತದ ವಿದ್ಯಾರ್ಥಿವೇತನ ವಿತರಿಸಲಾಗುವುದು. ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಸಾಧಕರನ್ನು ಗೌರವಿಸಿ ಸನ್ಮಾನಿಸಲಾಗುವುದು.
ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ.ಸಿ.ಎನ್. ಮಂಜುನಾಥ್ ವಿದ್ಯಾರ್ಥಿವೇತನ ವಿತರಣೆಗೆ ಚಾಲನೆ ನೀಡಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮತ್ತು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ವಿ. ಸುನಿಲ್ ಕುಮಾರ್, ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್ ಹಾಗೂ ಮಾಜಿ ಸಚಿವ ವಿನಯಕುಮಾರ್ ಸೊರಕೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 9 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಉಪಾಹಾರ ಮತ್ತು ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನೂ ಮಾಡಲಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಮಾಜಬಾಂಧವರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ವಿನಂತಿಸಿದ್ದಾರೆ ,ಪತ್ರಿಕಾಗೋಷ್ಠಿಯಲ್ಲಿ ಉದಯಚಂದ್ರ ಡಿ.ಸುವರ್ಣ ಉಪಸ್ಥಿತರಿದ್ದರು

