ಮಂಗಳೂರು: ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್ ಅವರ 45 ವರ್ಷಗಳ ಸುದೀರ್ಘ ರಾಜಕೀಯ ಪಯಣ, ಸಮರ್ಪಣೆ, ಪ್ರಾಮಾಣಿಕತೆ ಹಾಗೂ ಸಂಘಟನಾ ಸಾಮರ್ಥ್ಯ ಇಂದಿನ ರಾಜಕೀಯ ನಾಯಕರಿಗೆ ಮಾದರಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಹೇಳಿದರು.
ನಗರದ ಪುರಭವನದಲ್ಲಿ ಸಲೀಂ ಅಹಮದ್ ಅವರಿಗೆ ಆಯೋಜಿಸಿದ್ದ ಸಾರ್ವಜನಿಕ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಎನ್ಎಸ್ಯುಐನ ತಳಮಟ್ಟದ ಕಾರ್ಯಕರ್ತರಾಗಿ ರಾಜಕೀಯ ಜೀವನ ಆರಂಭಿಸಿದ ಸಲೀಂ ಅಹಮದ್, ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಸಂಘಟನೆಯ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ಅವರ ಸಮರ್ಪಣೆ, ಬದ್ಧತೆ ಮತ್ತು ಕಾರ್ಯದಕ್ಷತೆ ಶ್ಲಾಘನೀಯ ಎಂದರು.

ಕಾರ್ನಾಡ್ ಸದಾಶಿವರಾವ್ ಅವರಂತಹ ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ಸಾರ್ವಜನಿಕ ಜೀವನದಲ್ಲಿರುವವರು ಮೈಗೂಡಿಸಿಕೊಳ್ಳಬೇಕು. ಲಂಚ, ಆಮಿಷ ಹಾಗೂ ಅನೈತಿಕ ಚಟುವಟಿಕೆಗಳಿಂದ ದೂರವಿದ್ದು ಸಮಾಜಸೇವೆಗೆ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.
ಇದೇ ವೇಳೆ ಸಚಿವ ಯು.ಟಿ. ಖಾದರ್ ಅವರ ದಕ್ಷ ಕಾರ್ಯವೈಖರಿಯನ್ನು ಶ್ಲಾಘಿಸಿದ ಮೊಯ್ಲಿ, ಸಲೀಂ ಅಹಮದ್ ಮತ್ತು ಖಾದರ್ ದಕ್ಷಿಣ ಕನ್ನಡ ಜಿಲ್ಲೆಯ ಎರಡು ಪ್ರಮುಖ ರಾಜಕೀಯ ಶಕ್ತಿಗಳು ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ನಿಶ್ಚಲಾನಂದನಾಥ ಸ್ವಾಮೀಜಿ, ಸಲೀಂ ಅಹಮದ್ ಅವರು ರಾಜಕೀಯ ಏಳುಬೀಳುಗಳ ನಡುವೆಯೂ ತಾಳ್ಮೆ, ಸಹನೆ ಮತ್ತು ಸ್ಥಿರತೆ ಕಾಪಾಡಿಕೊಂಡು ವಿಶಿಷ್ಟ ರಾಜಕೀಯ ಪರಂಪರೆ ರೂಪಿಸಿಕೊಂಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಸಚಿವ ಯು.ಟಿ. ಖಾದರ್, ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಶಕುಂತಳಾ ಶೆಟ್ಟಿ, ಬಿ. ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪದ್ಮರಾಜ್ ಆರ್.ಪೂಜಾರಿ, ಸನ್ಮಾನ ಸಮಿತಿ ಅಧ್ಯಕ್ಷ ಟಿ.ಎಂ.ಶಾಹಿದ್ ತೆಕ್ಕಿಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

