ಮಂಗಳೂರು, ಮೇ 19 : ವಿದೇಶದಲ್ಲಿ ಉದ್ಯೋಗ ತೆಗೆಸಿಕೊಡುವುದಾಗಿ ಹೇಳಿ ನೂರಾರು ಮಂದಿಗೆ ಕೋಟ್ಯಂತರ ರೂಪಾಯಿ ದೋಖಾ ಎಸಗಲಾಗಿದೆ ಎಂಬ ಪ್ರಕರಣಲ್ಲಿ ಕರ್ತವ್ಯ ಲೋಪ ಎಸಗಿದ್ದಾರೆಂದು ಕದ್ರಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸೋಮಶೇಖರ್ ಮತ್ತು ಎಸ್ಐ ಉಮೇಶ್ ಕೆ.ಎನ್ ಅವರನ್ನು ಪೊಲೀಸ್ ಕಮಿಷನರ್ ಇಲಾಖಾ ಕರ್ತವ್ಯದಿಂದ ಅಮಾನತು ಮಾಡಿದ್ದಾರೆ.

ಮಂಗಳೂರಿನ ಕಂಕನಾಡಿಯಲ್ಲಿ ಕಚೇರಿಯನ್ನು ಹೊಂದಿದ್ದ ಖಾಸಗಿ ಸಂಸ್ಥೆ ನ್ಯೂಜಿಲೆಂಡ್ನ VALARIS ಕಂಪೆನಿಯಲ್ಲಿ ಉದ್ಯೋಗ ಕೊಡಿಸುವ ಬಗ್ಗೆ ಭರವಸೆ ನೀಡಿತ್ತು. ಹೀಗಾಗಿ ದಕ್ಷಿಣಕನ್ನಡ ಜಿಲ್ಲೆಯ 185ಕ್ಕೂ ಹೆಚ್ಚು ಮಂದಿ ಸಂತ್ರಸ್ತರಾಗಿದ್ದಾರೆ. Hire Glow Elegent overseas international Private Ltd ಎಂಬ ಹೆಸರಿನಿಂದ ವಂಚನೆಗೊಳಗಾದ 185 ಜನ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಪಕ್ಕದ ಉಡುಪಿ ಜಿಲ್ಲೆ, ಕೇರಳ ಸೇರಿದಂತೆ ಹೊರರಾಜ್ಯಗಳಿಂದ ಸುಮಾರು 300ಕ್ಕೂ ಹೆಚ್ಚು ಮಂದಿ ಉದ್ಯೋಗಕ್ಕಾಗಿ ಸಂಸ್ಥೆಯನ್ನು ಸಂಪರ್ಕಿಸಿದ್ದರು.

8 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ! ಸಂಸ್ಥೆಯು 185ಕ್ಕೂ ಹೆಚ್ಚು ವ್ಯಕ್ತಿಗಳಿಂದ ತಲಾ 1ಲಕ್ಷದ 85 ಸಾವಿರ ರೂ., ಎಜೆಂಟ್ಗಳ ಮುಖಾಂತರ ಸುಮಾರು 60 ಮಂದಿಯಿಂದ ತಲಾ 3 ಲಕ್ಷ ರೂಪಾಯಿ ಹಾಗೂ ಬೇರೆ ಬೇರೆ ರಾಜ್ಯದ ಏಜೆನ್ಸಿಗಳ ಮೂಲಕ ತಲಾ 5ಲಕ್ಷ ರೂಪಾಯಿ ಸಂಗ್ರಹಿಸಿತ್ತು. ಒಟ್ಟಾರೆಯಾಗಿ 300ಕ್ಕೂ ಹೆಚ್ಚು ಮಂದಿಯಿಂದ ಸುಮಾರು 8 ಕೋಟಿ ರೂಪಾಯಿಗೂ ಅಧಿಕ ಹಣ ಪಡೆದಿರುವ ಆರೋಪ ಸಂಸ್ಥೆಯ ಮೇಲಿದೆ. ಉದ್ಯೋಗಕಾಂಕ್ಷಿಗಳು ಎಲ್ಲಾ ಹಣವನ್ನು ಆನ್ಲೈನ್ ಮುಖಾಂತರವೇ ಹೈರ್ ಗ್ಲೋ ಕಂಪೆನಿಗೆ ಪಾವತಿಸಿದ್ದಾರೆ.


ವಂಚನೆ ತನಿಖೆಯಲ್ಲಿ ಲೋಪ,
ಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸಿದ ಪ್ರಕರಣ ಸಂಬಂಧ ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ. ನಕಲಿ ಸಂಸ್ಥೆಯ ಬಗ್ಗೆ ಆಫೀಸ್ ಪ್ರೊಟೆಕ್ಟರ್ ಎಮಿಗ್ರೇಟ್ಸ್ ಮೊದಲೇ ಎಚ್ಚರಿಕೆ ನೀಡಿತ್ತು ಎನ್ನಲಾಗಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಕಚೇರಿಗೂ ಮಾಹಿತಿ ನೀಡಿತ್ತು. ಅದರಂತೆ, ಸಂಸ್ಥೆಯ ವಿರುದ್ದ ತನಿಖೆ ನಡೆಸುವಂತೆ ಕದ್ರಿ ಪೊಲೀಸ್ ಠಾಣೆ ಅಧಿಕಾರಿಗಳಿಗೆ ಪೊಲೀಸ್ ಕಮೀಷನರ್ ಆದೇಶಿಸಿದ್ದರು. ಆದರೆ, ಪೊಲೀಸ್ ಅಧಿಕಾರಿಗಳು ತನಿಖೆಗೆ ನಿರ್ಲಕ್ಷ್ಯ ತೋರಿದ್ದರು ಎಂಬ ಆರೋಪ ಕೇಳಿಬಂದಿದೆ. ಪೊಲೀಸ್ ಅಧಿಕಾರಿಗಳು ನಕಲಿ ಸಂಸ್ಥೆಯಿಂದಲೇ ಹಣ ಪಡೆದು ದೋಖಾ ನಡೆಸಲು ಅವಕಾಶ ಮಾಡಿಕೊಟ್ಟಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸದ್ಯ ಕದ್ರಿ ಠಾಣೆ ಇನ್ಸ್ಪೆಕ್ಟರ್ ಸೋಮಶೇಖರ್, ಆ ಸಂದರ್ಭ ಪಿಎಸ್ಐ ಆಗಿದ್ದ ಉಮೇಶ್ ಅವರನ್ನು ಅಮಾನತು ಮಾಡಲಾಗಿದೆ.

