ಮಂಗಳೂರು, ಮೇ 27: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಹೀಂ ಎಂಬ ವ್ಯಕ್ತಿಯ ಹತ್ಯೆಯ ನಂತರ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ದಕ್ಷಿಣ ಕನ್ನಡ ಜಿಲ್ಲಾಡಳಿತವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, 2023 ರ ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಿದೆ.
ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ನೀಡಿದ್ದ ವರದಿಯನ್ನು ಉಲ್ಲೇಖಿಸಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ ಅವರು ಮೇ 27 ರಂದು ಆದೇಶ ಹೊರಡಿಸಿದ್ದಾರೆ. ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಲ್ಲಿ ಮೇ 27 ರಂದು ಸಂಜೆ 6.00 ಗಂಟೆಯಿಂದ ಮೇ 30 ರಂದು ಸಂಜೆ 6.00 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

ಈ ಸಂಧರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳನ್ನು ತಡೆಗಟ್ಟಲು ಮತ್ತು ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮುನ್ನೆಚ್ಚರಿಕೆಯಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಹೇಳಿದ್ದಾರೆ. ಮೇ 27 ರಂದು ಅವರ ಸಹಿ ಮತ್ತು ಅಧಿಕೃತ ಮುದ್ರೆಯೊಂದಿಗೆ ಆದೇಶವನ್ನು ಹೊರಡಿಸಲಾಗಿದೆ.

