ಬೆಂಗಳೂರು :ಆರ್ ಸಿಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತದಿಂದ 11 ಮಂದಿ ಬಲಿಯಾಗಿದ್ದು, 47 ಮಂದಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ 4 ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ.ಹಾಗೂ ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಇಂದು ಎಂದಿನಂತೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ನಿನ್ನೆ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ.

ಸಚಿವ ಸಂಪುಟ ಸಭೆ ಬಳಿಕ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಘಟನೆಯಲ್ಲಿ ಮೂರು ಸಂಸ್ಥೆಗಳ ಬೇಜವಾಬ್ದಾರಿ ಕಂಡು ಬಂದಿದೆ.ಆರ್ ಸಿಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಸೂಚಿಸಲಾಗಿದೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್, ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಹೆಚ್.ಟಿ.ಶೇಖರ್, ಎಸಿಪಿ ಬಾಲಕೃಷ್ಣ, ಕಬ್ಬನ್ಪಾರ್ಕ್ ಇನ್ಸ್ಪೆಕ್ಟರ್ ಗಿರೀಶ್.ಎ.ಕೆ ಅವರನ್ನು ಅಮಾನತು ಮಾಡಲಾಗಿದೆ ಎಂದರು.

ಈ ದುರಂತಕ್ಕೆ ಸಂಬಂಧಪಟ್ಟ ಚರ್ಚೆಯ ನಂತರ ತೆಗೆದುಕೊಂಡ ತೀರ್ಮಾನಗಳಾಗಿವೆ. ಉಪಮುಖ್ಯಮಂತ್ರಿಗಳು, ಗೃಹಸಚಿವರು, ಸಚಿವರಾದ ಎಚ್.ಕೆ.ಪಾಟೀಲ್, ಸುಧಾಕರ್ , ಮಹಾದೇವಪ್ಪ ಸೇರಿದಂತೆ ಸಿಬಿಐ ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು.
ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ.ನಾನು ಶಾಸಕ, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ.ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ.
ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.

