ಹಾಸನ: ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಪುತ್ರ ಸೂರಜ್ ರೇವಣ್ಣಗೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕೊನೆಗೂ ದೊಡ್ಡ ರಿಲೀಫ್ ದೊರೆತಿದೆ. ದಾಖಲಾಗಿದ್ದ 2 ಪ್ರಕರಣಗಳ ಪೈಕಿ ಒಂದರಲ್ಲಿ ಸಿಐಡಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.
ಸೂರಜ್ ರೇವಣ್ಣ ಬ್ರಿಗೇಡ್ನ ಖಜಾಂಚಿಯಾಗಿದ್ದ 30 ವರ್ಷದ ವ್ಯಕ್ತಿ ಸೂರಜ್ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿ 2024ರ ಜೂ.25ರಂದು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಇದರ ಆಧಾರದಲ್ಲಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಾಗಿತ್ತು.

ಆರಂಭದಲ್ಲಿ ಹಾಸನದ ಜಿಲ್ಲಾ ಪೊಲೀಸ್ ಠಾಣೆಗೆ ಸಂತ್ರಸ್ತ ದೂರು ನೀಡಲು ಆಗಮಿಸಿದ್ದರು. ಆದರೆ, ನಂತರ ಅದನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರಿಗೆ ವರ್ಗಾಯಿಸಲಾಗಿತ್ತು. ದೂರಿನ ಮೇರೆಗೆ ಪ್ರಕರಣ ದಾಖಲಿಸಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು. ಬಳಿಕ ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವರ್ಗಾಯಿಸಿತ್ತು. ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಸಾಕ್ಷ್ಯಗಳ ಕೊರತೆಯಿಂದ ಸೂರಜ್ ವಿರುದ್ಧದ ಆರೋಪ ಸಾಬೀತಾಗದ ಹಿನ್ನೆಲೆಯಲ್ಲಿ ಇದೀಗ ‘ಬಿ’ ರಿಪೋರ್ಟ್ ಸಲ್ಲಿಸಿದ್ದಾರೆ ಎನ್ನಲಾಗಿದೆ.

