ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸೆ.22ರಿಂದ ಅ.2ರವರೆಗೆ ಜರುಗಲಿರುವ ಮಂಗಳೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಪೂರ್ವಭಾವಿ ಸಮಾಲೋಚನಾ ಸಭೆ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಭಾನುವಾರ ಕ್ಷೇತ್ರದ ನವೀಕರಣ ರೂವಾರಿ,ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ನಡೆಯಿತು.

ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ ಮಾತನಾಡಿ, ಬಿ.ಜನಾರ್ದನ ಪೂಜಾರಿ ಮಾರ್ಗದರ್ಶನದಂತೆ ಮಂಗಳೂರು ದಸರಾವನ್ನು ವಿಶೇಷ ಹಾಗೂ ವೈಭವಯುತವಾಗಿ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ವಿವಿಧ ಸಮಿತಿ ರಚನೆ ಮಾಡಲಾಗುತ್ತದೆ. ಮಹೋತ್ಸವದ ಎಲ್ಲಾ ದಿನಗಳಂದು ಪ್ರಖ್ಯಾತ ತಂಡಗಳಿಂದ ವಿಶೇಷ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

ನಾರಾಯಣಗುರುಗಳು ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಶಿವಲಿಂಗ ಪ್ರತಿಷ್ಠಾಪನೆ ನಡೆಸಿದ ಫೆ.21ರ ದಿನದಂದು ಮುಂದಿನ ವರ್ಷ ಬೃಹತ್ ಕಾರ್ಯಕ್ರಮ ಆಯೋಜನೆ ಮಾಡಲು ತೀರ್ಮಾನಿಸಲಾಗಿದೆ. ದೇಶ-ವಿದೇಶದಲ್ಲಿರುವ ಸಮಾಜದ ಬಂಧುಗಳನ್ನು ಜತೆಯಾಗಿಸಲು ಇದು ಸಹಕಾರಿಯಾಗಲಿದೆ ಎಂದರು.

ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಟ್ರಸ್ಟಿಗಳಾದ ಸಂತೋಷ್ ಕುಮಾರ್, ಕಿಶೋರ್ ದಂಡೆಕೇರಿ, ಕೃತೀನ್ ಡಿ.ಅಮೀನ್, ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಡಾ.ಬಿ.ಜಿ. ಸುವರ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಉಪಸ್ಥಿತರಿದ್ದರು.

ಮಂಗಳೂರು ದಸರಾ ಯಶಸ್ವಿಗಾಗಿ ವಿವಿಧ ಉಪ ಸಮಿತಿಗಳನ್ನು ರಚಿಸಲಾಯಿತು ,ಕ್ಷೇತ್ರದ ಭಕ್ತರು,ವಿವಿಧ ಸಂಘ ಸಂಸ್ಥೆಗಳ ನೂರಾರು ಪದಾಧಿಕಾರಿಗಳು ಭಾಗವಹಿಸಿದ್ದರು.





